ಅ.17ರವರೆಗೆ ರಿಯಾದ್, ಜಿದ್ದಾ, ದಮ್ಮಾಮ್, ಮದೀನಾಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

Photo: Hindustan Times
ಹೊಸದಿಲ್ಲಿ: ಹೌತಿಗಳ ದಾಳಿಯಿಂದಾಗಿ ಸೌದಿ ಅರೇಬಿಯಾದಲ್ಲಿ ಬದಲಾಗುತ್ತಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ರಿಯಾದ್, ಜಿದ್ದಾ, ದಮ್ಮಾಮ್ ಮತ್ತು ಮದೀನಾ ನಗರಗಳಿಗೆ ತೆರಳುವ ಹಾಗೂ ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟವನ್ನು ಅ.17ರವರೆಗೆ ರದ್ದುಗೊಳಿಸಲಾಗಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ಇಂಡಿಗೋ ಸಂಸ್ಥೆಯ ವೆಬ್ಸೈಟ್ನಲ್ಲಿ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸುವಂತೆ ವಿಮಾನಯಾನ ಸಂಸ್ಥೆ ಸೂಚಿಸಿದೆ.
ಟಿಕೆಟ್ ಬುಕಿಂಗ್ ಸಮಯದಲ್ಲಿ ನೀಡಿದ ಸಂಪರ್ಕ ವಿವರಗಳಿಗೆ ಮಾಹಿತಿಗಳನ್ನು ನೀಡಲಾಗುತ್ತದೆ. ಪ್ರಯಾಣಿಕರ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ನೆರವು ನೀಡಲು ನಮ್ಮ ಸಹಾಯ ತಂಡಗಳು ಲಭ್ಯವಿದೆ ಎಂದು ಇಂಡಿಗೋ ತಿಳಿಸಿದೆ.
ನಿಮ್ಮ ಸುರಕ್ಷತೆ ಮತ್ತು ಯೋಗಕ್ಷೇಮವೇ ನಮ್ಮ ಮೊದಲ ಆದ್ಯತೆ. ಸುರಕ್ಷಿತ ವಿಮಾನ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸುತ್ತಿದ್ದೇವೆ ಎಂದು ವಿಮಾನಯಾನ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಹೇಳಿದೆ.
ಯೆಮನ್ನ ಇರಾನ್ ಬೆಂಬಲಿತ ಹೌತಿ ಬಂಡುಕೋರರ ನಿರಂತರ ದಾಳಿಗಳ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ವಾಯುಪ್ರದೇಶದಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ರಿಯಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಶನಿವಾರದವರೆಗೆ ಸ್ಥಗಿತಗೊಳಿಸಲಾಗಿದೆ.






