ಪಾಕಿಸ್ತಾನ: ಮಳೆ, ಪ್ರವಾಹಕ್ಕೆ ಕನಿಷ್ಠ 160 ಬಲಿ; ವ್ಯಾಪಕ ನಷ್ಟ

PC : NDTV
ಪೇಷಾವರ, ಆ.15: ವಾಯವ್ಯ ಪಾಕಿಸ್ತಾನದಾದ್ಯಂತ ಧಾರಾಕಾರ ಮಳೆಯಿಂದ ಭಾರೀ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ಕನಿಷ್ಠ 160 ಮಂದಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಅತ್ಯಧಿಕ ಸಾವು-ನೋವು ಸಂಭವಿಸಿದ್ದು 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬುನೆರ್ ಗ್ರಾಮದಲ್ಲಿ ಸುರಿದ ನಿರಂತರ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿದೆ. ಹಲವಾರು ಮನೆಗಳು, ಕಟ್ಟಡಗಳು ಕುಸಿದಿದ್ದು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆಯಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 9 ಮಂದಿ, ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಾಯವ್ಯದ ಬಜೌರ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು 20ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿರುವುದಾಗಿ ಪ್ರಾಂತೀಯ ವಿಪತ್ತು ನಿರ್ವಹಣಾ ಏಜೆನ್ಸಿಯನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಸುಮಾರು 15 ಮಂದಿ ನಾಪತ್ತೆಯಾಗಿರುವ ಮಾಹಿತಿಯಿದ್ದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ದೋಣಿಗಳು ಮತ್ತು ಹೆಲಿಕಾಪ್ಟರ್ ಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.





