ಇರಾನ್ ಮೇಲಿನ ಇಸ್ರೇಲ್ ದಾಳಿಗೆ ಪುಟಿನ್, ಜಿಂಪಿಂಗ್ ಖಂಡನೆ

ವ್ಲಾದಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ | NDTV
ಮಾಸ್ಕೋ: ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಯನ್ನು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಖಂಡಿಸಿರುವುದಾಗಿ ರಶ್ಯ ಅಧ್ಯಕ್ಷರ ಕಚೇರಿ ಹೇಳಿಕೆ ನೀಡಿದೆ.
ಮಧ್ಯಪ್ರಾಚ್ಯದ ಇತ್ತೀಚಿನ ಬೆಳವಣಿಗೆ ಬಗ್ಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಉಭಯ ನಾಯಕರು ಇಸ್ರೇಲ್ ನ ಕೃತ್ಯಗಳು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ಸಹಮತ ವ್ಯಕ್ತಪಡಿಸಿದರು. ಇರಾನ್ ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಬಿಕ್ಕಟ್ಟಿಗೆ ಮಿಲಿಟರಿ ಕಾರ್ಯಾಚರಣೆಯ ಮಾರ್ಗದ ಬದಲು ರಾಜತಾಂತ್ರಿಕ ಮಾರ್ಗದ ಮೂಲಕ ಮಾತ್ರ ಪರಿಹಾರ ಸಾಧ್ಯ ಎಂದು ಒತ್ತಿಹೇಳಿದ ನಾಯಕರು ಸಂಘರ್ಷ ಮತ್ತಷ್ಟು ಉಲ್ಬಣಿಸದಂತೆ ರಾಜತಾಂತ್ರಿಕ ಪ್ರಕ್ರಿಯೆಗೆ ಒತ್ತಾಯಿಸಿದ್ದಾರೆ.
ಇರಾನ್-ಇಸ್ರೇಲ್ ನಡುವೆ ಸಂಧಾನ ಮಾತುಕತೆಗೆ ಪುಟಿನ್ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಚೀನಾ ಸ್ವಾಗತಿಸಿದೆ ಎಂದು ರಶ್ಯ ಅಧ್ಯಕ್ಷರ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.





