ASEAN Summit | `ಕ್ವಾಡ್' ವಿಶ್ವಾಸಾರ್ಹ ಪರಿಹಾರ ಒದಗಿಸುತ್ತದೆ: ಪ್ರಧಾನಿ ಮೋದಿ

ನರೇಂದ್ರ ಮೋದಿ | Photo Credit : PTI
ಮನಿಲಾ: ಕ್ವಾಡ್ ಒಕ್ಕೂಟವು ರಚನಾತ್ಮಕ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಯಾಗಿದ್ದು ಕಡಲ ಭದ್ರತೆ, ಪೂರೈಕೆ ಸರಪಳಿಗಳು, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ವಿಪತ್ತು ನಿರ್ವಹಣೆಯನ್ನು ಒಳಗೊಂಡ ಸಹಕಾರದೊಂದಿಗೆ ಇಂಡೋ-ಪೆಸಿಫಿಕ್ ಪ್ರದೇಶದಾದ್ಯಂತ ಪರಿಹಾರಗಳನ್ನು ಒದಗಿಸಲು ಈ ಒಕ್ಕೂಟ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ಮನಿಲಾದಲ್ಲಿ ನಡೆಯುತ್ತಿರುವ ಆಸಿಯಾನ್ ಶೃಂಗಸಭೆಯ ನೇಪಥ್ಯದಲ್ಲಿ ಕ್ವಾಡ್ ನಾಯಕರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಒಕ್ಕೂಟದ ನಿರಂತರ ತೊಡಗಿಸಿಕೊಳ್ಳುವಿಕೆಯು ಅದರ ಸದಸ್ಯ ರಾಷ್ಟ್ರಗಳ ರಾಜಕೀಯ ಇಚ್ಛಾಶಕ್ತಿ ಮತ್ತು ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ಸಭೆಯು ಮುಂದಿನ ಹಂತದ ಸಹಕಾರಕ್ಕಾಗಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸಲು ಸಹಾಯ ಮಾಡುತ್ತದೆ ಎಂದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಸಹ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾವನ್ನು ಒಳಗೊಂಡಿರುವ `ಕ್ವಾಡ್' , ಕಡಲ ಭದ್ರತೆ, ತಂತ್ರಜ್ಞಾನ, ಮೂಲಸೌಕರ್ಯ ಮತ್ತು ಪ್ರಾದೇಶಿಕ ಸ್ಥಿರತೆಯಲ್ಲಿ ಸಹಕಾರದ ಮೂಲಕ ಮುಕ್ತ, ತೆರೆದ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್ ಪ್ರದೇಶವನ್ನು ಉತ್ತೇಜಿಸಲು ಪ್ರಯತ್ನಿಸುವ ಒಂದು ಕಾರ್ಯತಂತ್ರದ ಒಕ್ಕೂಟವಾಗಿದೆ.






