ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ ನಡೆಸುವ ಸಾಧ್ಯತೆ ತೀರಾ ಕಡಿಮೆ: ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ (Photo Credit : PTI)
ವಾಷಿಂಗ್ಟನ್: ಇರಾನ್ನ ಸೇನಾ ಶಕ್ತಿ ಬಹುತೇಕ ಅಂತ್ಯಗೊಂಡಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಕೊನೆಗೊಳಿಸುವ ಮಾತುಕತೆಗಳು ಸಕಾರಾತ್ಮಕವಾಗಿ ಸಾಗುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ ನಡೆಸುವ ಸಾಧ್ಯತೆ ತೀರಾ ಕಡಿಮೆ ಎಂದಿದ್ದಾರೆ. ಆದರೆ ಪರಿಸ್ಥಿತಿ ಬದಲಾದರೆ ದಾಳಿ ನಡೆಸಲು ಅಮೆರಿಕ ಸಿದ್ಧವಾಗಿದೆ ಎಂದು ಎಚ್ಚರಿಸಿದ್ದಾರೆ.
ನೆರೆ ರಾಷ್ಟ್ರಗಳ ಮನವಿಯ ಮೇರೆಗೆ ಸದ್ಯಕ್ಕೆ ಯುದ್ಧದ ಪರಿಸ್ಥಿತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇರಾನ್ ಯುದ್ಧದಿಂದ ಚುನಾವಣೆಯಲ್ಲಿ ಹಿನ್ನಡೆ?
ಇತ್ತೀಚೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷ ಹಿನ್ನಡೆ ಅನುಭವಿಸಿದೆ. ಇರಾನ್ ಯುದ್ಧವೇ ಈ ಸೋಲಿಗೆ ಪ್ರಮುಖ ಕಾರಣ ಎಂದು ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಸೇರಿದಂತೆ ಪಕ್ಷದ ಕೆಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಟ್ರಂಪ್ ಇರಾನ್ ವಿರುದ್ಧದ ಸಂಘರ್ಷವನ್ನು ಕಡಿಮೆ ಮಾಡುವ ಸೂಚನೆ ನೀಡಿದ್ದಾರೆ. ರವಿವಾರ ನೀಡಿದ ಸಂದರ್ಶನದಲ್ಲಿಯೂ ಯುದ್ಧವನ್ನು ಮತ್ತಷ್ಟು ತೀವ್ರಗೊಳಿಸಲು ಸದ್ಯ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಹೇಳಿದ್ದರು.
ಯುದ್ಧವನ್ನು ಅಧಿಕೃತವಾಗಿ ಕೊನೆಗೊಳಿಸುವ ಘೋಷಣೆ ಏಕೆ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಇರಾನ್ನಿಂದ ಕೊಲ್ಲಿ ರಾಷ್ಟ್ರಗಳಿಗೆ ಇನ್ನೂ ಅಪಾಯವಿದೆ ಎಂದು ಹೇಳಿದ್ದಾರೆ.
ಸೌದಿ ಅರೇಬಿಯಾ, ಖತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿದಂತೆ ಅಮೆರಿಕದ ಮಿತ್ರ ರಾಷ್ಟ್ರಗಳು ಇರಾನ್ ದಾಳಿಗಳನ್ನು ಎದುರಿಸಿವೆ. ಈ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ವಿಮಾನಯಾನಕ್ಕೂ ಅಡಚಣೆ ಉಂಟಾಗಿದೆ.
ಸೋಮವಾರ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಖತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರನ್ನು ಭೇಟಿಯಾಗಿದ್ದು, ಯುದ್ಧವನ್ನು ಕೊನೆಗೊಳಿಸುವ ಒಪ್ಪಂದದ ಕುರಿತು ಉತ್ತಮ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ. ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ಖತಾರ್ ಪ್ರಧಾನಿ ಕೂಡ ತಿಳಿಸಿದ್ದಾರೆ.






