ಭಾರತ-ಪಾಕ್ ನಡುವಿನ ಉದ್ವಿಗ್ನತೆ ಶಮನಕ್ಕೆ ಸಹಾಯ ಮಾಡಲು ಸಿದ್ಧ : ಡೊನಾಲ್ಡ್ ಟ್ರಂಪ್

Credit: Reuters Photo
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡಲು ಸಹಾಯ ಮಾಡಲು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತ- ಪಾಕ್ ನಡುವಿನ ದಾಳಿಯ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಇದು ತುಂಬಾ ಭಯಾನಕವಾಗಿದೆ. ನನಗೆ ಎರಡೂ ದೇಶಗಳ ಬಗ್ಗೆ ಚೆನ್ನಾಗಿ ಗೊತ್ತಿದೆ. ಈ ಉಲ್ಭಣಗೊಂಡಿರುವ ಸಮಸ್ಯೆ ಪರಿಹಾರ ಕಾಣುವುದನ್ನು ನಾನು ಬಯಸುತ್ತೇನೆ. ಯುದ್ಧ ನಿಲ್ಲಿಸುವುದನ್ನು ನಾನು ನೋಡಲು ಬಯಸುತ್ತೇನೆ. ಒಬ್ಬರು ಅನುಭವಿಸಿದ್ದ ನೋವಿಗೆ ಪ್ರತ್ಯುತ್ತರ ನೀಡಿದ್ದಾರೆ. ಹಾಗಾಗಿ, ಪರಸ್ಪರ ದಾಳಿಯನ್ನು ಇದೀಗ ನಿಲ್ಲಿಸಬಹುದು. ಎರಡೂ ರಾಷ್ಟ್ರಗಳು ಅಮೆರಿಕದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿವೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡುವ ದೃಷ್ಟಿಯಿಂದ ಸಹಾಯ ಮಾಡಲು ಸಾಧ್ಯವಾದರೆ, ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದರು.
ಎಪ್ರಿಲ್ 22ರಂದು ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು. ಆ ಬಳಿಕ ಭಾರತ ಮತ್ತು ಪಾಕ್ ನಡುವಿನ ಸಂಬಂಧ ಹದಗೆಟ್ಟಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಬುಧವಾರ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದೆ.





