ಆಳಂದದಲ್ಲಿ 3.50 ಕೋಟಿ ರೂ. ವೆಚ್ಚದ 12 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ

ಆಳಂದ : ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ಆಶ್ರಯದಲ್ಲಿ ಪೊಲೀಸ್ ಗೃಹ–2025 ಹಂತ–4 ಯೋಜನೆಯಡಿ 3 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 12 ನೂತನ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಸಮಾರಂಭ ನೆರವೇರಿತು.
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಸ್ಥಳೀಯ ಶಾಸಕ ಬಿ.ಆರ್. ಪಾಟೀಲ ಅವರು ವಸತಿ ಗೃಹಗಳನ್ನು ವಿಧ್ಯುಕ್ತವಾಗಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು.
ಕರ್ತವ್ಯ ನಿರ್ವಹಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಪೊಲೀಸ್ ಸಿಬ್ಬಂದಿಗೆ ಸೂಕ್ತ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದರು.
ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಗಳ ಜೀವನಮಟ್ಟ ಸುಧಾರಿಸಲು ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಅಧೀಕ್ಷಕ ಮಹೇಶ ಮೇಘಣ್ಣನವರು, ಉಪ ಅಧೀಕ್ಷಕರು ತಮ್ಮರಾಯ ಪಾಟೀಲ, ವೃತ್ತ ನಿರೀಕ್ಷ ಜಗದೀಶ ಕೆ.ಜಿ., ಪಿಐ ಶರಣಬಸಪ್ಪ ಕೊಡ್ಲಾ, ಠಾಣಾ ಪಿಎಸ್‌ಐ ಸಂಜಯ ರೆಡ್ಡಿ, ಹಿರಿಯ ಪೊಲೀಸ್ ಸಿಬ್ಬಂದಿ ವರ್ಗ ಸೇರಿದಂತೆ ಜಿಪಂ ಮಾಜಿ ಸದಸ್ಯ ಸಿದ್ದರಾಮ ಪ್ಯಾಟಿ ಸೇರಿದಂತೆ ಅನೇಕರು ಇದ್ದರು.






