ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಚುನಾವಣಾ ಕಣದಲ್ಲಿ 13 ಅಭ್ಯರ್ಥಿಗಳು

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಯ ಚುನಾವಣೆ ಇದೇ ಅಕ್ಟೋಬರ್ 23 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂತಿಮವಾಗಿ ಚುನಾವಣಾ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ್ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆಯಲು ಶುಕ್ರವಾರ ಕೊನೆ ದಿನವಾಗಿದ್ದರಿಂದ ಪಕ್ಷೇತರ ಅಭ್ಯರ್ಥಿ ನಬಿರಸೂಲ್ ತಂದೆ ದಸ್ತಗೀರಸಾಬ್ ಜಕಾತಿ ಎಂಬವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಬುಧವಾರ ನಡೆದ ನಾಮಪತ್ರ ಪರಿಶೀಲನೆಯಲ್ಲಿ 14 ಅಭ್ಯರ್ಥಿಗಳ ನಾಮೊತ್ರ ಕ್ರಮಬದ್ಧವಾಗಿದ್ದವು. ಇದೀಗ ಓರ್ವ ಅಭ್ಯರ್ಥಿ ನಾಮಪತ್ರ ಚಾಪಸ್ ಪಡೆದಿದ್ದರಿಂದ ಅಂತಿಮ ಚುನಾವಣಾ ಕಣದಲ್ಲಿ 13 ಅಭ್ಯರ್ಥಿಗಳು ಮಾತ್ರ ಉಳಿದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ತಂದೆ ಹಣಮಂತಪ್ಪ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ತಂದೆ ಗಂಗಾಧರ ನಮೋಶಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಯಬಣ್ಣಾ ತಂದೆ ನಾಗೀಂದ್ರ,
ಜನತಾ ದಳ(ಸಂಯುಕ್ತ) ಪಕ್ಷದ ಅಭ್ಯರ್ಥಿ ಶಂಕರೆಡ್ಡಿ ಪಾಟೀಲ, ಪಕ್ಷೇತರ ಅಭ್ಯರ್ಥಿಗಳಾದ ಕವಿರಾಜ, ತುಳಸಪ್ಪ ದಾಸರ, ಮಹಬೂಬ್, ರಾಜಕುಮಾರ, ರಾಜು, ಶರಣಬಸಪ್ಪ, ಶಶಿಧರ, ಶಿವಶಂಕರ ಹಾಗೂ ಡಾ.ಸುರೇಶ ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳಾಗಿದ್ದಾರೆ.




