ಜೇವರ್ಗಿಯಲ್ಲಿ 7.40 ಕ್ವಿಂಟಾಲ್ ಪಡಿತರ ಅಕ್ಕಿ ವಶ: ಓರ್ವನ ವಿರುದ್ಧ ಪ್ರಕರಣ ದಾಖಲು

ಜೇವರ್ಗಿ : ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ನ. 17ರಂದು ಜಂಟಿ ದಾಳಿ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಹಮ್ಮದ್ ಅಜೀಜ್ ಅಬಕಾರಿ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪಟ್ಟಣದ ಸೋಫಿ ಕಾಲೋನಿಯಲ್ಲಿರುವ ವಾಟರ್ ಫಿಲ್ಟರ್ ಘಟಕವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 25,160 ರೂ. ಮೌಲ್ಯದ ಪಡಿತರ ಅಕ್ಕಿಯನ್ನು ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಜೇವರ್ಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನವೆಂಬರ್ 17ರ ರಾತ್ರಿ 9 ಗಂಟೆ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 17 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 7 ಕ್ವಿಂಟಾಲ್ 40 ಕೆ.ಜಿ. ಪಡಿತರ ಅಕ್ಕಿ ಪತ್ತೆಯಾಗಿದೆ. ಈ ಸಂಬಂಧ ಆರೋಪಿ ಮುಹಮ್ಮದ್ ಅಜೀಜ್ ಅಬಕಾರಿ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಹಲವು ವರ್ಷಗಳಿಂದ ಪಟ್ಟಣದಲ್ಲಿ ರಾಜಾರೋಷವಾಗಿ ಅಕ್ರಮ ಅಕ್ಕಿ ದಂಧೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ದಂಧೆಕೋರರು ಯಾರಿಗೂ ಅನುಮಾನ ಬಾರದಂತೆ ಮನೆಗಳು, ವಾಟರ್ ಪ್ಲಾಂಟ್‌ಗಳು ಹಾಗೂ ಖಾಸಗಿ ಸ್ಥಳಗಳಲ್ಲಿ ಬಡವರಿಗೆ ಸೇರಬೇಕಾದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಕ್ರಮ ಅಕ್ಕಿ ಸಾಗಣೆ ಮತ್ತು ಸಂಗ್ರಹಣೆಯಲ್ಲಿ ತೊಡಗಿರುವವರ ವಿರುದ್ಧ ಅಧಿಕಾರಿಗಳು ನಿರಂತರವಾಗಿ ಕಠಿಣ ಕಾನೂನು ಕ್ರಮ ಕೈಗೊಂಡಾಗ ಮಾತ್ರ ಈ ದಂಧೆಗೆ ಕಡಿವಾಣ ಹಾಕಲು ಸಾಧ್ಯ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೂಡಲೇ ಬಂಧಿಸಿ, ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಪ್ರತಿದಿನ ಪಟ್ಟಣದಲ್ಲಿ ಸಂಚರಿಸಿ ಅಕ್ಕಿ ಖರೀದಿ ಅಂಗಡಿಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ಕಿ ಸಂಗ್ರಹಿಸುವ ಅಂಗಡಿಗಳು ಹಾಗೂ ಕೇಂದ್ರಗಳ ಮೇಲೂ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಾಹಿತಿದಾರರ ವಿವರ ಬಹಿರಂಗದ ಆರೋಪ :
ಅಕ್ರಮ ಅಕ್ಕಿ ಸಂಗ್ರಹದ ಕುರಿತು ಮಾಹಿತಿ ನೀಡುವವರ ಗುರುತಿನ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮಾಹಿತಿದಾರರ ಸಂಪೂರ್ಣ ವಿವರಗಳನ್ನು ಗೌಪ್ಯವಾಗಿಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮೈಹಿಬುಬ್ ಅಲಿ, ಆಹಾರ ಇಲಾಖೆಯ ಸಿಬ್ಬಂದಿ ಪ್ರಶಾಂತ ಪೂಜಾರಿ ಹಾಗೂ ರಾಜಶೇಖರ ಕೊಂಡಗೂಳಿ ಉಪಸ್ಥಿತರಿದ್ದರು.






