Afzalpur | 140 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ : 4.76 ಲಕ್ಷ ರೂ. ಮೌಲ್ಯದ ಅಕ್ಕಿ ವಶ, ಪ್ರಕರಣ ದಾಖಲು

ಅಫಜಲಪುರ, ಆ.7: ಸರ್ಕಾರದ ಪಡಿತರ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 140 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಫಜಲಪುರ–ದುಧನಿ ಮಾರ್ಗವಾಗಿ ಮಹಾರಾಷ್ಟ್ರದ ಸೋಲಾಪುರಕ್ಕೆ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ತಹಶೀಲ್ದಾರ್ ಸಂಜೀವಕುಮಾರ ದಾಸರ ನಿರ್ದೇಶನದಂತೆ ಆಹಾರ ನಿರೀಕ್ಷಕ ಹರಿದಾಸ ಚೋಪಡೆ ಹಾಗೂ ಅಫಜಲಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.
ಮಾದಬಾಳ ತಾಂಡ ಸಮೀಪದ ಶ್ರೇಯಸ್ ಪೆಟ್ರೋಲ್ ಬಂಕ್ ಬಳಿ ಟೆಂಪೋ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ ಸುಮಾರು 140 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಯಿತು. ಜಪ್ತಿಗೊಂಡ ಅಕ್ಕಿಯ ಅಂದಾಜು ಮೌಲ್ಯ 4.76 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಬಸವನಬಾಗೇವಾಡಿ ಭಾಗದಿಂದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಟೆಂಪೋ ಚಾಲಕ ಪ್ರಶಾಂತ್ ಹಿರೇಮಠ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ಸಂಗಮೇಶ ಅಂಗಡಿ, ಕ್ರೈಂ ವಿಭಾಗದ ಸಿಬ್ಬಂದಿಗಳಾದ ಆನಂದ ಸ್ವಾಮಿ, ಯಲ್ಲಪ್ಪ ಭಜಂತ್ರಿ, ರಾಣಬಾ ದೇವಕತೆ, ರಫೀಕ್ ಸೇರಿದಂತೆ ಆಹಾರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.






