Afzalpur | ಕಾಂಗ್ರೆಸ್ ಪಕ್ಷಕ್ಕೆ ಭೀಮರಾವ್ ಗೌರ ರಾಜೀನಾಮೆ

ಅಫಜಲಪುರ: ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ಮುಖಂಡ ಭೀಮರಾವ್ ಗೌರ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಶಾಸಕ ಎಂ.ವೈ. ಪಾಟೀಲ್ ಹಾಗೂ ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಉದ್ದೇಶಿಸಿ ಬರೆದ ರಾಜೀನಾಮೆ ಪತ್ರವನ್ನು ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ್ ಹಾಗೂ ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಅವರ ರಾಜಕೀಯ ಬೆಳವಣಿಗೆಗಾಗಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿದು, ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದೇನೆ. ಆದರೆ, ನಿಷ್ಠಾವಂತ ಕಾರ್ಯಕರ್ತರನ್ನು ಬೆಳೆಸುವ ಬದಲು ನಿರ್ಲಕ್ಷಿಸಿ ತುಳಿಯುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಆರೋಪಿಸಿದರು.
ಪಕ್ಷದಲ್ಲಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರನ್ನು ಕಡೆಗಣಿಸಿ, ಪಕ್ಷದ್ರೋಹಿಗಳಿಗೆ ಮನ್ನಣೆ ನೀಡಲಾಗುತ್ತಿದೆ. ಬಡವರು, ಅಲ್ಪಸಂಖ್ಯಾತರು ಹಾಗೂ ದಲಿತರ ಅಭಿವೃದ್ಧಿ ಯೋಜನೆಗಳು ದುರುಪಯೋಗವಾಗುತ್ತಿದ್ದು, ಭ್ರಷ್ಟಾಚಾರ ಮಿತಿಮೀರಿದೆ. ಪಕ್ಷದ ಕೆಳಮಟ್ಟದ ಕಾರ್ಯಕರ್ತರ ಧ್ವನಿಗೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಯಾವುದೇ ಗೌರವ ದೊರೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತು, ತಮ್ಮ ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆ ಮತ್ತು ಜವಾಬ್ದಾರಿಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿರುವುದಾಗಿ ಭೀಮರಾವ್ ಗೌರ ತಿಳಿಸಿದ್ದಾರೆ.






