ಅಫಜಲಪುರ | ವಿದ್ಯುತ್ ಖಾಸಗೀಕರಣ ವಿರೋಧಿಸಿ ಜೂ.15ರಂದು ರೈತರಿಂದ ಪ್ರತಿಭಟನೆ

ಅಫಜಲಪುರ : ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ, ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಬೇಕು ಹಾಗೂ ಮಂಗಳೂರು ಮತ್ತು ಅಳಗಿ ಗ್ರಾಮಗಳ ಐಪಿ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಕ್ರಮವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಜೂನ್ 15ರಂದು ಅಫಜಲಪುರ ಪಟ್ಟಣದಲ್ಲಿ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರೈತ ಮುಖಂಡ ಗುರು ಚಾಂದಕವಟೆ, ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜೂನ್ 15ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕುಗಳ ಪರ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.
ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದೊರೆಯದೇ ತೀವ್ರ ಸಮಸ್ಯೆ ಎದುರಾಗಿದೆ. ಕೃಷಿ ಕಾರ್ಯಗಳಿಗೆ ಅಗತ್ಯವಾದ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸುವ ಮೂಲಕ ರೈತರ ಸಂಕಷ್ಟವನ್ನು ಸರ್ಕಾರ ತಕ್ಷಣ ನಿವಾರಿಸಬೇಕು ಎಂದು ಅವರು ಆಗ್ರಹಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕಾಗಿದ್ದು, ಮಂಗಳೂರು ಹಾಗೂ ಅಳಗಿ ಗ್ರಾಮಗಳ ಐಪಿ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಕ್ರಮದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಿರ್ಧಾರವನ್ನು ಹಿಂಪಡೆದು ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ರೈತರು ಹಾಗೂ ಗ್ರಾಮೀಣ ಜನತೆಯ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದ್ದು, ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈಬಿಟ್ಟು ಕೃಷಿ ಕ್ಷೇತ್ರದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಹೇಳಿದರು.






