Afzalpur | ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ ; 99.80 ಕ್ವಿಂಟಲ್ ಅಕ್ಕಿ ವಶ

ಅಫಜಲಪುರ : ಸರ್ಕಾರದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಯಲ್ಲಿ ಖರೀದಿಸಿ ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮಹಾರಾಷ್ಟ್ರದ ಧುದನಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 99.80 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಂಜೀವಕುಮಾರ ದಾಸರ ಆದೇಶದಂತೆ ಆಹಾರ ನಿರೀಕ್ಷಕ ಮಹ್ಮದ್ ಶೋಹೇಬ್ ನೇತೃತ್ವದಲ್ಲಿ ಅತನೂರ ಗ್ರಾಮದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಲಾಯಿತು.
ಪರಿಶೀಲನೆ ವೇಳೆ ವಾಹನದಲ್ಲಿ ಸುಮಾರು 99.80 ಕ್ವಿಂಟಲ್ ಅಕ್ಕಿ ಪತ್ತೆಯಾಗಿದ್ದು, ಅದರ ಅಂದಾಜು ಮೌಲ್ಯ 3,39,320 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ವಾಹನ ಮಾಲಕ ದಿಗಂಬರ ನಾಗಣಸೂರ ವಿರುದ್ಧ ರೇವೂರ(ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.






