Afzalpur | ಸರ್ಕಾರಿ ಶಾಲೆಗಳ ಖಾಸಗಿ ಜೋಡಣೆ, ವಿಲೀನಕ್ಕೆ ಎಸ್‌ಎಫ್‌ಐ ವಿರೋಧ

ಅಫಜಲಪುರ : ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲೂಕು ಘಟಕದ ವತಿಯಿಂದ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಹೆಸರಿನಲ್ಲಿ ಸರ್ಕಾರ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಸುತ್ತಿದೆ. ಇದರಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ ಎಂದು ಎಸ್‌ಎಫ್‌ಐ ಮುಖಂಡರು ಆರೋಪಿಸಿದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದೆ. ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ಹಾಗೂ ಪಠ್ಯಪುಸ್ತಕಗಳ ಪೂರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದೆ, ದಾಖಲಾತಿ ಕುಸಿತವನ್ನು ನೆಪವಾಗಿಸಿಕೊಂಡು ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವ ಬದಲು ಖಾಸಗಿ ಸಂಸ್ಥೆಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದು ಆಗ್ರಹಿಸಲಾಯಿತು.
ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಸಂವಿಧಾನದ ಅನುಚ್ಛೇದ 21(ಎ) ಪ್ರಕಾರ 6ರಿಂದ 14 ವರ್ಷದ ಮಕ್ಕಳಿಗೆ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಆದ್ದರಿಂದ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಹಾಗೂ ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷೆ ಸುಜಾತ ವೈ., ಜಿಲ್ಲಾ ಕಾರ್ಯದರ್ಶಿ ಇಮಾಮಸಾಬ ನದಾಫ್, ತಾಲೂಕು ಕಾರ್ಯದರ್ಶಿ ಶ್ರೀನಿವಾಸ್, ಮುಖಂಡ ವೆಂಕಟೇಶ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






