Afzalpur | ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು: ಮಂಜೂರ್ ಅಹ್ಮದ್ ಪಟೇಲ್
ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಅಫಜಲಪುರ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಗಳು ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತವೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ನೆಲೆಸಿರುತ್ತದೆ ಎಂದು ಶ್ರೀ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಂಜೂರ್ ಅಹ್ಮದ್ ಪಟೇಲ್ ಹೇಳಿದರು.
ಪಟ್ಟಣದ ಶ್ರೀಮತಿ ಮಹಾಂತಮ್ಮ ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ 2026–27ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಫಜಲಪುರ ಸಂಸ್ಥಾನ ಹಿರೇಮಠದ ಶ್ರೀ ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಕೋಶಾಧ್ಯಕ್ಷ ಸದಾಶಿವ ಮೇತ್ರಿ ಹಾಗೂ ಆಡಳಿತ ಮಂಡಳಿ ಸದಸ್ಯ ಮಹೇಶ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ರೀಡಾಕೂಟದಲ್ಲಿ ವಾಲಿಬಾಲ್, ಕಬಡ್ಡಿ ಸೇರಿದಂತೆ ವೈಯಕ್ತಿಕ ವಿಭಾಗದ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಡಿಸ್ಕಸ್ ಥ್ರೋ ಹಾಗೂ ಜಾವೆಲಿನ್ ಥ್ರೋ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು ಎಂಟು ಕಾಲೇಜುಗಳ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ತಾಲೂಕು ಕ್ರೀಡಾ ಶಿಕ್ಷಣಾಧಿಕಾರಿ ಪ್ರಕಾಶ ಚಾಂದಕವಟೆ ಮಾತನಾಡಿ, ಕ್ರೀಡಾಕೂಟದಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಕ್ರೀಡಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ ಡಾಳೆ ಉಪಸ್ಥಿತರಿದ್ದರು. ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಕ್ರೀಡಾ ಶಿಕ್ಷಕ ಅನಿಲ್ ಹೂನಳ್ಳಿ ಕ್ರೀಡಾಕೂಟದ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ, ಸ್ಥಳೀಯ ಸರ್ಕಾರಿ ಕಿರಿಯ ಮಹಾವಿದ್ಯಾಲಯದ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.






