Kalaburagi | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್ ಶಾಲೆಗಳಿಗೆ ಆದ್ಯತೆ: ಎಐಡಿಎಸ್ಒ ವಿರೋಧ

ವೆಂಕಟೇಶ ದೇವದುರ್ಗ
ಕಲಬುರಗಿ: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಸ್ವಾಗತಿಸಿದರೂ, ಈ ಎಲ್ಲ ಹುದ್ದೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಸ್ (ಕೆಪಿಎಸ್)ಗಳಿಗೆ ಮಾತ್ರ ಮೀಸಲಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕ್ರಮವನ್ನು ಅಖಿಲ ಭಾರತೀಯ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಎಐಡಿಎಸ್ಒ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಇತ್ತೀಚೆಗೆ ನೇಮಕಗೊಂಡ 11 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳ ಹಂಚಿಕೆಯಲ್ಲಿ ಸಹ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಶಿಕ್ಷಕರ ವರ್ಗಾವಣೆಯಲ್ಲೂ ಕೆಪಿಎಸ್ ಶಾಲೆಗಳಿಗೆ ಪ್ರಾಶಸ್ತ್ಯ ನೀಡಲಾಗುತ್ತಿದ್ದು, ದಶಕಗಳಿಂದ ಗ್ರಾಮೀಣ ಪ್ರದೇಶದ ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಒದಗಿಸುತ್ತಿರುವ ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ಕೆಪಿಎಸ್ ಶಾಲೆಗಳಿಗೆ ಸರ್ಕಾರಿ ಶಾಲೆಗಳ ವಿಲೀನದ ವಿರುದ್ಧ ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಸಮಿತಿಯ ನೇತೃತ್ವದಲ್ಲಿ ಹೋರಾಟಗಳು ನಡೆಯುತ್ತಿವೆ. ಸಾವಿರಾರು ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದರೂ, ಇದೀಗ ನೇರವಾಗಿ ಶಾಲೆಗಳನ್ನು ಮುಚ್ಚದೆ, ಶಿಕ್ಷಕರ ನೇಮಕಾತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕೆಪಿಎಸ್ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸುವ ಮೂಲಕ ಗ್ರಾಮೀಣ ಶಾಲೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಸುಮಾರು 7 ಸಾವಿರ ಏಕೋಪಾಧ್ಯಾಯ ಶಾಲೆಗಳಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ತೀವ್ರ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಶಾಲೆಗಳಲ್ಲಿ ಸಮರ್ಪಕ ಶಿಕ್ಷಕರಿಲ್ಲದ ಕಾರಣ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.






