Aland | ಬೆಳೆ ನಷ್ಟ, ಸಾಲದ ಹೊರೆ: ಮನನೊಂದು ರೈತ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಆಳಂದ: ಮಳೆಯ ಅಭಾವದಿಂದ ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದೆ ಕೃಷಿಯಲ್ಲಿ ನಷ್ಟ ಅನುಭವಿಸಿದ್ದಲ್ಲದೆ, ಮಾಡಿದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಮುನವಳ್ಳಿ ಗ್ರಾಮದಲ್ಲಿ ರವಿವಾರ ನಡೆದಿದೆ.
ಮೃತ ರೈತನನ್ನು ಗುರುಶಾಂತಯ್ಯ ಬಂಡಯ್ಯ ಮಠಪತಿ (50) ಎಂದು ಗುರುತಿಸಲಾಗಿದೆ. ಅವರಿಗೆ 7 ಎಕರೆ 14 ಗುಂಟೆ ಜಮೀನು ಇತ್ತು. ಕೃಷಿಗಾಗಿ ಕೆಜಿಬಿ ಬ್ಯಾಂಕ್ನಲ್ಲಿ 2.50 ಲಕ್ಷ ರೂ. ಹಾಗೂ ಪಿಕೆಪಿಎಸ್ನಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದರು. ಇದರ ಜೊತೆಗೆ ಖಾಸಗಿಯಾಗಿ ಕೈಗಡವಾಗಿ ಬಡ್ಡಿಗೆ ಸುಮಾರು 5 ಲಕ್ಷ ಸಾಲ ರೂ. ಮಾಡಿಕೊಂಡಿದ್ದರು ಎನ್ನಲಾಗಿದೆ.
ಮಳೆಯ ಕೊರತೆಯಿಂದ ಬೆಳೆ ಕೈಕೊಟ್ಟಿದ್ದರಿಂದ ಕೃಷಿಯಿಂದ ನಿರೀಕ್ಷಿತ ಆದಾಯ ಬಾರದೆ ಸಾಲದ ಹೊರೆ ಹೆಚ್ಚಾಗಿತ್ತು. ಇಷ್ಟೊಂದು ಸಾಲವನ್ನು ಹೇಗೆ ತೀರಿಸಬೇಕು ಎಂಬ ಚಿಂತೆಯಿಂದ ಮನನೊಂದು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ಪತ್ನಿ ಜಯಶ್ರೀ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






