ಆಳಂದ | ಶಾಸಕ ಬಿ.ಆರ್.ಪಾಟೀಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ: ಗುರುಶರಣ ಪಾಟೀಲ್

ಆಳಂದ: ಶಾಸಕ ಬಿ.ಆರ್.ಪಾಟೀಲ್ ಅವರನ್ನು ಶ್ವಾನಕ್ಕೆ ಹೋಲಿಕೆ ಮಾಡಿರುವ ಹರ್ಷಾನಂದ ಗುತ್ತೇದಾರ ಅವರ ಹೇಳಿಕೆ ಖಂಡನೀಯ. ಈ ಕುರಿತು ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ್ ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿರುವವರು ತಮ್ಮ ಮಾತು ಮತ್ತು ವರ್ತನೆಯಲ್ಲಿ ಜವಾಬ್ದಾರಿ ಪ್ರದರ್ಶಿಸಬೇಕು. ಜನಪ್ರತಿನಿಧಿಗಳ ಹುದ್ದೆಯ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪದಬಳಕೆ ಮಾಡುವುದು ಸರಿಯಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ವೈಯಕ್ತಿಕ ನಿಂದನೆಗೆ ಅವಕಾಶ ನೀಡಬಾರದು. ಆದ್ದರಿಂದ ಹರ್ಷಾನಂದ ಗುತ್ತೇದಾರ ಅವರು ತಮ್ಮ ಹೇಳಿಕೆ ಕುರಿತು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಮ ಪ್ಯಾಟೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂಬ ಕಾರಣಕ್ಕೆ ಮನಬಂದಂತೆ ಮಾತನಾಡುವುದು ಸರಿಯಲ್ಲ. ಈ ಹೇಳಿಕೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವಾಗಿದೆ. ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಾಬುರಾವ ಸುಳ್ಳದ, ಕೆಪಿಸಿಸಿ ಸದಸ್ಯ ರಾಜಶೇಖರ ಪಾಟೀಲ ಚಿತಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.




