Aland | ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿ: ಸಿಇಒ ರಾಹುಲ್ ಸಂಕನೂರ ಸೂಚನೆ

ಆಳಂದ : ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದರೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಾಹುಲ್ ಸಂಕನೂರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಮಾನವ ದಿನಗಳ ಸೃಜನೆ, ಇ-ಕೆವೈಸಿ ಪ್ರಗತಿ, ಇ-ಎಫ್‌ಎಂಎಸ್, ತೆರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಪಾವತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು.
ಪ್ರತಿ ಗ್ರಾಮ ಪಂಚಾಯಿತಿಯ ಪ್ರಗತಿ ವರದಿಯನ್ನು ಪರಿಶೀಲಿಸಿದ ಸಿಇಒ, ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ವಿಶೇಷವಾಗಿ ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ಹೆಚ್ಚಿಸುವುದು, ಕುಡಿಯುವ ನೀರಿನ ಗುಣಮಟ್ಟದ ಮೇಲ್ವಿಚಾರಣೆ ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಿಬ್ಬಂದಿಗಳ ವೇತನ ಪಾವತಿಯಲ್ಲಿ ಯಾವುದೇ ವಿಳಂಬ ಉಂಟಾಗದಂತೆ ನೋಡಿಕೊಳ್ಳಬೇಕೆಂದರು.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಸೂಚಿಸಿದ ಅವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡದೆ ಜನರ ಕರೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಹಾಗೂ ಸಭೆಗೆ ಗೈರುಹಾಜರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಬುಧವಾರ ತಾಲೂಕು ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಗುರಿ ಸಾಧನೆಗೆ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಜಿಲ್ಲಾ ಪಂಚಾಯಿತಿ ಎಇಇ ಸಂಗಮೇಶ, ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳು ಉಪಸ್ಥಿತರಿದ್ದರು.






