Aland | ರೈತರಿಗೆ ಬಿತ್ತನೆ ಬೀಜ ವಿತರಣೆಯಲ್ಲಿ ತಾರತಮ್ಯ ಖಂಡಿಸಿ ಪ್ರತಿಭಟನೆ

ಆಳಂದ: ಖಜೂರಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಖಜೂರಿ ವಲಯದ ರೈತರು ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದಿಂದ ರೈತರಿಗೆ ಒದಗಿಸಲಾಗುತ್ತಿರುವ ಬಿತ್ತನೆ ಬೀಜಗಳನ್ನು ಸಮಾನವಾಗಿ ವಿತರಿಸುವ ಜವಾಬ್ದಾರಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಮೇಲಿದೆ. ಆದರೆ ಖಜೂರಿ ಕಾರ್ಯಾಲಯದ ಕೆಲ ಅಧಿಕಾರಿಗಳು ತಮಗೆ ಬೇಕಾದ ರೈತರು ಹಾಗೂ ನಿರ್ದಿಷ್ಟ ಗ್ರಾಮಗಳಿಗೆ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಬೀಜ ವಿತರಿಸುತ್ತಿದ್ದು, ಉಳಿದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಳೆದ ವರ್ಷವೂ ಅನೇಕ ರೈತರು ಬಿತ್ತನೆ ಬೀಜಕ್ಕಾಗಿ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವರ್ಷವೂ ರಾಜಕೀಯ ಪ್ರಭಾವ ಹೊಂದಿರುವ ಗ್ರಾಮಗಳು ಹಾಗೂ ಆಯ್ದ ರೈತರಿಗೆ ಆದ್ಯತೆ ನೀಡಲಾಗುತ್ತಿದ್ದು, ಇತರೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.
ಮುಂಗಾರು ಬಿತ್ತನೆ ಅವಧಿಯಲ್ಲಿ ಬೀಜಗಳ ಕೊರತೆ ಉಂಟಾದರೆ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಲಿದೆ. ಹೀಗಾಗಿ ಯಾವುದೇ ತಾರತಮ್ಯವಿಲ್ಲದೆ ಎಲ್ಲ ಅರ್ಹ ರೈತರಿಗೆ ಸಮಾನವಾಗಿ ಬಿತ್ತನೆ ಬೀಜ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಕುಮಾರ ಬಂಡೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಫುಲ ಬಾಬಳಸುರ, ಶರಣಬಸಪ್ಪ ಬನಶೆಟ್ಟಿ, ಬಳಿರಾಮ ತಡೋಳಾ, ತುಕಾರಾಮ ಮುರುಮೆ ಸೇರಿದಂತೆ ಖಜೂರಿ ವಲಯದ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.
ಮನವಿ ಸ್ವೀಕರಿಸಿದ ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ವಿ. ಅವರು, ಬೀಜ ವಿತರಣೆಯಲ್ಲಿ ಯಾವುದೇ ತಾರತಮ್ಯ ಸಹಿಸಲಾಗುವುದಿಲ್ಲ. ಎಲ್ಲ ಅರ್ಹ ರೈತರಿಗೆ ಸಮರ್ಪಕವಾಗಿ ಬೀಜ ವಿತರಣೆ ಮಾಡಲು ಅಗತ್ಯ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಇದಾದ ಬಳಿಕ ರೈತರು ಪ್ರತಿಭಟನೆಯನ್ನು ಹಿಂಪಡೆದರು.






