ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಪ್ರಕರಣ ರದ್ದು ಕೋರಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಹೈಕೋರ್ಟ್ ಮೊರೆ

ಎನ್.ರವಿಕುಮಾರ್
ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ (ಐಎಎಸ್) ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ಕಲಬುರಗಿ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದತ್ತಾತ್ರೇಯ ಇಕ್ಕಳಕಿ ಅವರು ನೀಡಿದ ದೂರಿನ ಅನ್ವಯ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ, ಎಸ್ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಇತ್ತೀಚೆಗೆ ಬಿಜೆಪಿಯಿಂದ ನಡೆದ ಪ್ರತಿಭಟನೆಯ ವೇಳೆ ಎನ್.ರವಿಕುಮಾರ್ ಅವರು ತಮ್ಮ ಭಾಷಣದಲ್ಲಿ ‘ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ ಎಂಬ ಹೇಳಿಕೆ ನೀಡಿದ್ದರು. ಹೀಗಾಗಿ ಎನ್.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.







