ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಬಸ್, ಕಾರು, ಆಟೋಗಳನ್ನು ತಡೆದು ಆಕ್ರೋಶ

ಕಲಬುರಗಿ: ಜಿಲ್ಲೆಯಲ್ಲಿ ಶೇ.50ಕ್ಕಿಂತ ಕಡಿಮೆ ಮಳೆಯಾಗಿ ಬಹುತೇಕ ಬೆಳೆಗಳು ಹಾನಿಗೀಡಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರವಾಗಿ ಹಿನ್ನಡೆ ಕಂಡಿದ್ದು, ರೈತರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟವನ್ನು ಕಡೆಗಣಿಸಿದ್ದು, ಮಳೆ ಕೊರತೆ ಹಾಗೂ ಬೆಳೆ ಹಾನಿಯ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕಲಬುರಗಿಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಯಿಂದ ಕೈಬಿಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್, ಕಾರು ಹಾಗೂ ಆಟೋಗಳನ್ನು ಪ್ರತಿಭಟನಾಕಾರರು ತಡೆದು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಮಾತನಾಡಿ, ಸಚಿವ ಸ್ಥಾನ ನೀಡುವ ಸಂದರ್ಭದಲ್ಲಿ ಮೊದಲ ಸುತ್ತಿನಲ್ಲಿ ಅವಕಾಶ ನೀಡಿದಂತೆ, ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವ ವಿಚಾರದಲ್ಲಿಯೂ ಮೊದಲ ಹಂತದಲ್ಲೇ ಪರಿಗಣಿಸಬೇಕಿತ್ತು ಎಂದು ಸರ್ಕಾರವನ್ನು ಟೀಕಿಸಿದರು.
ಜಿಲ್ಲೆಯ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೂಡಲೇ ಬರ ಘೋಷಿಸಿ ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಅಗತ್ಯ ನೆರವು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆ ವೇಳೆ ಬೈಕ್ ಸವಾರರು ಪ್ರತಿಭಟನಾ ಸ್ಥಳದ ಮೂಲಕ ತೆರಳಲು ಮುಂದಾದಾಗ ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಬೈಕ್ ತಡೆದು ಸವಾರನ ಹೆಲ್ಮೆಟ್ ಅನ್ನು ನೆಲಕ್ಕೆ ಒಡೆದಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಈ ಘಟನೆಯಿಂದ ಕೆಲಕಾಲ ಪ್ರತಿಭಟನಾ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಚಂದು ಪಾಟೀಲ್, ಮಾಜಿ ಸಂಸದ ಉಮೇಶ್ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ನಿತಿನ್ ಗುತ್ತೇದಾರ್, ವಿಶಾಲ ದರ್ಗಿ, ಅವ್ವಣ್ಣ ಮ್ಯಾಕೇರಿ, ಸಂತೋಷ್ ಹಾದಿಮನಿ, ಮಹಾದೇವ ಬೆಳಮಗಿ, ಸುಧಾ ಹಾಲಕಾಯಿ, ಶರಣಪ್ಪ ತಳವಾರ, ಸಚಿನ್ ಕಟ್ಟಿಮನಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






