ನ.25ರಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ
ಇವಿಎಂ ದೋಷವಿದ್ದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಲಿ: ಮಾಜಿ ಸಚಿವ ರಾಜೂಗೌಡ

ಕಲಬುರಗಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನ.25ರಂದು ಕಲಬುರಗಿಗೆ ಆಗಮಿಸಲಿದ್ದು, ನಗರದಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ರಾಜೂಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂರಾದ ಕಲಬುರಗಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ‘ಲೋಕತಂತ್ರ ಬಜಾವೋ, ಅರಾಜಕತೆ ಹಠಾವೋ’ ಘೋಷಣೆಯೊಂದಿಗೆ ದೇಶದ 13 ಸ್ಥಳಗಳಲ್ಲಿ ಪ್ರಜಾಪ್ರಭುತ್ವ ಉಳಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಕಲಬುರಗಿಯನ್ನು ಆಯ್ಕೆ ಮಾಡಲಾಗಿದ್ದು, ನ.25ರಂದು ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಎಸ್ಐಆರ್ ಪರವಾಗಿ ಬಿಜೆಪಿ ನಾಯಕರು ಜನಜಾಗೃತಿ ಮೂಡಿಸಲಿದ್ದಾರೆ. ಇದೇ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಲಬುರಗಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಇವಿಎಂ ವಿಚಾರದಲ್ಲಿ ಕಾಂಗ್ರೆಸ್ಗೆ ರಾಜೂಗೌಡ ತಿರುಗೇಟು :
ಇವಿಎಂ ದೋಷದ ಕುರಿತು ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ರಾಜೂಗೌಡ, “ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬಂತೆ ಕಾಂಗ್ರೆಸ್ನವರು ಇವಿಎಂ ಸರಿಯಿಲ್ಲ ಎಂದು ಪದೇಪದೆ ಹೇಳುತ್ತಿದ್ದಾರೆ” ಎಂದು ಟೀಕಿಸಿದರು.
ಇವಿಎಂ ಸರಿಯಿಲ್ಲ ಎಂದಾದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಹೇಗೆ? ಬಿಜೆಪಿಯವರು ಸೋತಿದ್ದು ಹೇಗೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ದೋಷದ ಆರೋಪ ಮಾಡುತ್ತಾರೆ ಎಂದು ಹೇಳಿದರು.
ನಿಜವಾಗಿಯೂ ಇವಿಎಂನಲ್ಲಿ ದೋಷವಿದೆ ಎಂದು ಭಾವಿಸಿದ್ದರೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯನ್ನು ಎದುರಿಸಲಿ ಎಂದು ಸವಾಲು ಹಾಕಿದರು.






