Chitapur | ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಚಿತ್ತಾಪುರ : ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಂತೋಷನಗರದಲ್ಲಿ ನಡೆದಿದ್ದು, ಈ ಸಂಬಂಧ ಪತಿ ಸೇರಿದಂತೆ ನಾಲ್ವರ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ರಮೀಜಾ ಎಂದು ಗುರುತಿಸಲಾಗಿದೆ. ಮೃತೆಯ ತಂದೆ ಇಸ್ಮಾಯಿಲ್ ಮಹೇಬೂಬ್ ಅಲಿ ನಾಯ್ಕೋಡಿ (ಸಾತನೂರು) ನೀಡಿದ ದೂರಿನ ಮೇರೆಗೆ, ಪತಿ ಅಬ್ದುಲ್ ಹುಸೇನ್ ಶೇಖ್, ಅತ್ತೆ ಸಾಹೇರಾ ಬಾನು, ಗಂಡನ ಅಜ್ಜಿ ಹಪೀಜಾ ಹಾಗೂ ಗಂಡನ ಅಣ್ಣನ ಪತ್ನಿ ನಿಶಾದ್ ಅಬ್ದುಲ್ ಗಫೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಆರೋಪಿಗಳು ವರದಕ್ಷಿಣೆಯಾಗಿ ಹೆಚ್ಚಿನ ಹಣ ಮತ್ತು ಬಂಗಾರ ತರುವಂತೆ ಒತ್ತಾಯಿಸಿ ರಮೀಜಾಗೆ ನಿರಂತರವಾಗಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಅವರು ಜುಲೈ 2ರಂದು ಸಂಜೆ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ದೂರಿನ ಆಧಾರದ ಮೇಲೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 101/2026 ದಾಖಲಿಸಿ, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)–2023ರ ಕಲಂ 80(2), 85 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪಿಎಸ್ಐ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.
ಪ್ರಕರಣದ ಎಲ್ಲ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






