Chitapur | ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿ ಮುಖಂಡರು ದಂಡೋತಿ ಗ್ರಾಮಕ್ಕೆ ಬರುತ್ತಿದ್ದಾರೆ : ತಿಮ್ಮನಾಯಕ ಆರೋಪ

ಚಿತ್ತಾಪುರ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿ ಮುಖಂಡರು ದಂಡೋತಿ ಗ್ರಾಮದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬರುತ್ತಿದ್ದಾರೆ ಹೊರತು, ಅವರಿಗೆ ವಿದ್ಯಾರ್ಥಿಗಳ ಸಮಸ್ಯೆಯೊಂದಿಗೆ ಯಾವುದೇ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜಶೇಖರ್ ತಿಮ್ಮನಾಯಕ ಆರೋಪಿಸಿದರು.
ತಾಲೂಕಿನ ದಂಡೋತಿ ಗ್ರಾಮದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣ ಸ್ಪಂದಿಸಿದ್ದರಿಂದಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಪರಿಹಾರ ಕ್ರಮ ಕೈಗೊಂಡರು. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ಈ ಪ್ರಕರಣದೊಂದಿಗೆ ಬಿಜೆಪಿ ಮುಖಂಡರಿಗೆ ಯಾವುದೇ ಸಂಬಂಧವಿಲ್ಲ. ವಸತಿ ಶಾಲೆಯವರು ಉದ್ದೇಶಪೂರ್ವಕವಾಗಿ ವಿಷಪೂರಿತ ಆಹಾರ ನೀಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ದಂಡೋತಿ ಗ್ರಾಮದ ಹೆಸರಿಗೆ ಕಳಂಕ ತರುವ ಹಾಗೂ ಘಟನೆಗೆ ರಾಜಕೀಯ ಬಣ್ಣ ಹಚ್ಚುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
ಮಕ್ಕಳು ಅಥವಾ ಪಾಲಕರು ಆತಂಕಪಡುವ ಅಗತ್ಯವಿಲ್ಲ. ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಎಂದು ಅವರು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ರಮೇಶ್ ಕವಡೆ ಮಾತನಾಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಗ್ರಾಮದ ಮುಖಂಡರು ಈವರೆಗೆ ಶಾಲೆಗೆ ಭೇಟಿ ನೀಡಿರಲಿಲ್ಲ. ಆದರೆ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ರಾಜಕೀಯ ಮಾಡುತ್ತಿದ್ದಾರೆ. ಮತ್ತೊಮ್ಮೆ ಇದೇ ರೀತಿ ನಡೆದುಕೊಂಡರೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.
ದಂಡೋತಿ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವುದರಿಂದ ಅದನ್ನು ದುರ್ಬಲಗೊಳಿಸುವ ಉದ್ದೇಶದಿಂದ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದು ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಸಾಬಣ್ಣ ಭರಾಟೆ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆದರೂ ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದು ಅವರಿಗೆ ಶಾಂತಿ ಬೇಡ, ಅಶಾಂತಿಯೇ ಬೇಕೆಂಬುದನ್ನು ತೋರಿಸುತ್ತದೆ. ಘಟನೆ ನಡೆದು ಒಂದು ವಾರವಾದ ಬಳಿಕ ರಾಜಕೀಯ ಉದ್ದೇಶದಿಂದ ಬಿಜೆಪಿ ಮುಖಂಡರು ಶಾಲೆಗೆ ಬಂದಿದ್ದು, ವಿದ್ಯಾರ್ಥಿಗಳ ಸಮಸ್ಯೆಗಿಂತ ಪ್ರಿಯಾಂಕ್ ಖರ್ಗೆ ವಿರುದ್ಧ ಟೀಕೆ ಮಾಡುವುದೇ ಅವರ ಉದ್ದೇಶವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಡಾ.ದಾವುದ್ ಪಟೇಲ್ ಮಾತನಾಡಿದರು. ತಾಪಂ ಮಾಜಿ ಸದಸ್ಯ ಮುನಿಯಪ್ಪ ಕೊಳ್ಳಿ, ಕಾಂಗ್ರೆಸ್ ಅಧ್ಯಕ್ಷ ರಷೀದ್ ಪಠಾಣ್, ಮುಖಂಡರಾದ ಶಂಕರ ಕೊಳ್ಳಿ, ದೇವದಾಸ್, ಶರೀಫ್ ತೋಶವಾಲೆ, ಇಸಾಕ್ ಜಲೀಲ್, ಕಂಟೇಪ್ಪ ಮೂಕೆ, ನಾಗು ಭರಾಟೆ, ರವಿ ರಂಗಪ್ಪ, ವೆಂಕಟೇಶ್, ವಾಹೇದ್ ಸೇರಿದಂತೆ ಇತರರು ಇದ್ದರು.






