Chitapur | ಡಿಎಪಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ರಸಗೊಬ್ಬರ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘ ಆಗ್ರಹ

ಚಿತ್ತಾಪುರ: ಪಟ್ಟಣದ ರಸಗೊಬ್ಬರ ಅಂಗಡಿಗಳು ಹಾಗೂ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘವು ಡಿಎಪಿ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ರೈತರಿಗೆ ನಿಗದಿತ ದರದಲ್ಲಿ ರಸಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಮಾರಾಟ ನಡೆಸುತ್ತಿರುವ ಅಂಗಡಿಗಳು ಮತ್ತು ಸಂಘದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಮೌನೇಶ್ ಭಂಕಲಗಿ, ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಆದರೆ ಕೆಲ ವ್ಯಾಪಾರಿಗಳು ರೈತರಿಗೆ ನಿಗದಿತ ದರದಲ್ಲಿ ರಸಗೊಬ್ಬರ ನೀಡದೆ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಸಗೊಬ್ಬರ ಅಂಗಡಿಗಳಲ್ಲಿ ದರಪಟ್ಟಿ ಪ್ರದರ್ಶಿಸದೇ ಇರುವುದು ಹಾಗೂ ಕೆಲವರಿಗೆ ಮಾತ್ರ ರಸಗೊಬ್ಬರ ನೀಡುವ ಮೂಲಕ ತಾರತಮ್ಯ ಮಾಡಲಾಗುತ್ತಿದೆ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಅವರು ದೂರಿದರು.
ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ನಡೆಯುತ್ತಿರುವ ತಾರತಮ್ಯವನ್ನು ತಕ್ಷಣವೇ ನಿವಾರಿಸಬೇಕು. ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಎರಡು ಅಥವಾ ಮೂರು ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಗೌರವಾಧ್ಯಕ್ಷ ಶಾಂತಕುಮಾರ ಮಳಖೇಡ, ದಶರಥ್ ದೊಡ್ಡಮನಿ, ಗುರುನಾಥ್ ಅಲ್ಲೂರ, ಚಂದ್ರಶೇಖರ್ ಅವಂಟಿ, ಉಮೇಶ್ ಸಾತನೂರ, ಕಾಶಿನಾಥ ವಿಶ್ವಕರ್ಮ ಸೇರಿದಂತೆ ಇತರರು ಇದ್ದರು.






