Chitapur | ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಚಿತ್ತಾಪುರ: ತಾಲೂಕಿನ ಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ನಿರ್ಮಾಣದ ಸ್ಥಳವನ್ನು ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಪರಿಶೀಲಿಸಿದರು.
ಶಾಲೆಯ 8 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರ ನೇತೃತ್ವದಲ್ಲಿ ಮುಖ್ಯಗುರುಗಳು, ಗುತ್ತಿಗೆದಾರರು ಹಾಗೂ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ನೂತನ ಕಟ್ಟಡ ನಿರ್ಮಿಸುವ ಸಂದರ್ಭದಲ್ಲಿ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗುತ್ತಿಗೆದಾರರು ಹಾಗೂ ಇಂಜಿನಿಯರ್‌ಗೆ ವಿಶ್ವನಾಥ ಪಾಟೀಲ ಹೆಬ್ಬಾಳ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಬಾಬರ್ ಪಟೇಲ್, ಕ್ಲಾಸ್-1 ಸಿವಿಲ್ ಗುತ್ತಿಗೆದಾರ ಎಂ.ಡಿ. ಸಿರಾಜೋದ್ದಿನ್, ಮುಖಂಡ ಬಸವರಾಜ ಶಿವಗೋಳ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.






