ಮಾ. 8ಕ್ಕೆ ಚಿತ್ತಾಪುರಕ್ಕೆ ಮುಖ್ಯಮಂತ್ರಿ: ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಇದೇ ಮಾರ್ಚ್ 8 ರಂದು ಸಾವಿರಾರು ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವ ಸಿದ್ಧತೆ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು.
ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡ ರಚಿಸಲಾದ ವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಪ್ರದೇಶದ ಸಚಿವರುಗಳು, ಶಾಸಕರು, ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಶಿಷ್ಠಾಚಾರದಂತೆ ಮತ್ತು ಎಲ್ಲಿಯೂ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಬೇಕೆಂದರು.
ಕಾರ್ಯಕ್ರಮಕ್ಕೆ ತಾಲುಕಿನ ವಿವಿಧ ಭಾಗಗಳಿಂದ ಸುಮಾರು 10 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಆಸನ ವ್ಯವಸ್ಥೆ, ಸಂಒಊರ್ಣ ಶಾಮುಯಾನ ಇರುವಂತೆ ನೊಡಿಕೊಳ್ೞಬೇಕು. ಕುಡಿಯುವ ನೀರಿನ ವ್ಯವಸ್ಥೆ, ಮೋಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಸಾರ್ವಜನಿಕರಿಗೆ ನೂಕು ನುಗ್ಗಲು ಆಗದಂತೆ ಊಟಕ್ಕೆ ಹೆಚ್ಚಿನ ಕೌಂಟರ್ ತೆರೆಯಬೇಕು. ಇನ್ನು ತಾಲೂಕಿನಿಂದ ವಿವಿಧ ಕಡೆಯಿಂದ ಜನರು ಆಗಮಿಸುವುದರಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಸಮಯ ಇದಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇರುವಂತೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗುವುದರಿಂದ ಪೊಲೀಸ್ ಇಲಾಖೆಯು ಸೂಕ್ತ ಪೊಲೀಸ್ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ನಿರ್ವಹಣೆ ಮಾಡಬೇಕು. ಇನ್ನು ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳು ರಚಿಸಲಾಗಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಡಿಸಿ ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ. ಹೀಗಾಗಿ ಆಯಾ ಇಲಾಖೆಯ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನು ಶಿಷ್ಠಾಚಾರದಂತೆ ಮುದ್ರಿಸಿ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಇಲಾಖೆಯ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ತಲುಪಿಸಬೇಕು. ಸಚಿವರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಲೈಸನ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ, ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.







