ಚಿತ್ತಾಪುರ | ನ.28ರಂದು ಬಸವ ಭವನ, ವಿದ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನೆ : ನಾಗರೆಡ್ಡಿ ಪಾಟೀಲ್

ಚಿತ್ತಾಪುರ: ಪಟ್ಟಣದ ರಾವೂರ ರಸ್ತೆಯಲ್ಲಿ ಶ್ರೀ ಬಸವೇಶ್ವರ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಬಸವ ಭವನ ಹಾಗೂ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯ ನವೆಂಬರ್ 28ರಂದು ಉದ್ಘಾಟನೆಗೊಳ್ಳಲಿವೆ ಎಂದು ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 4 ಕೋಟಿ ರೂ. ವೆಚ್ಚದಲ್ಲಿ ಬಸವ ಭವನ ಹಾಗೂ 75 ಲಕ್ಷ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಿಸಲಾಗಿದೆ. ಅಂದು ಬೆಳಗ್ಗೆ 6ರಿಂದ 9 ಗಂಟೆಯವರೆಗೆ ವಾಸ್ತುಪೂಜೆ ನಡೆಯಲಿದ್ದು, ಬಳಿಕ ಸನ್ಮಾನ ಸಮಾರಂಭ ಹಾಗೂ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ನಾಲವಾರದ ಡಾ. ಸಿದ್ದತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಬಸವ ಭವನವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ್ ಖಂಡ್ರೆ ಮತ್ತು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ. ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರು ಹಾಗೂ ಬಸವಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಭಂಕಲಗಿ, ಖಜಾಂಚಿ ಅಣ್ಣಾರಾವ ಪಾಟೀಲ್ ಮುಡಬೂಳ, ಚಂದ್ರಶೇಖರ ಸಾತನೂರ, ಪ್ರಭುದೇವ ಬೊಮ್ಮನಳ್ಳಿ, ಶರಣು ಸಜ್ಜನಶೆಟ್ಟಿ ದಿಗ್ಗಾಂವ, ಚಂದ್ರಕಾಂತ ಪಾಟೀಲ್ ಬೆಳಗುಂಪಾ, ಶರಣಗೌಡ ಪಾಟೀಲ್, ಅಶೋಕ ನಿಪ್ಪಾಣಿ ಹಾಗೂ ಅನಿಲ ವಡ್ಡಡಗಿ ಉಪಸ್ಥಿತರಿದ್ದರು.






