ಚಿತ್ತಾಪುರ | ವಿಶ್ವ ಪರಿಸರ ದಿನಾಚರಣೆ

ಚಿತ್ತಾಪುರ : ಆರೋಗ್ಯಯುತ ಸಮಾಜ ನಿರ್ಮಾಣವಾಗಬೇಕಾದರೆ ಸ್ವಚ್ಛ ಹಾಗೂ ಶುದ್ಧ ಪರಿಸರ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿರಾಜುದ್ದೀನ್ ಎ. ಅಭಿಪ್ರಾಯಪಟ್ಟರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪ್ರಾದೇಶಿಕ ಅರಣ್ಯ ವಲಯ ಚಿತ್ತಾಪುರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಪರಿಸರ ಸ್ವಚ್ಛತೆ ಇರಬೇಕಾದರೆ ಎಲ್ಲರೂ ಸಸಿಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ವಲಯ ಪ್ರಾದೇಶಿಕ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ್ ಮಾತನಾಡಿ, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮರಗಳು ಭೂಮಿಯ ಶ್ವಾಸಕೋಶಗಳಾಗಿವೆ. ಹೆಚ್ಚು ಹೆಚ್ಚು ಮರಗಳನ್ನು ನೆಡುವುದರಿಂದ ಶುದ್ಧ ಗಾಳಿ, ಉತ್ತಮ ಹವಾಮಾನ ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದರು.
ಇಂದು ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ದೊಡ್ಡ ಸವಾಲಾಗಿದೆ. ವಿಶೇಷವಾಗಿ ಏಕಬಳಕೆ ಪ್ಲಾಸ್ಟಿಕ್ ಭೂಮಿ, ನೀರು ಹಾಗೂ ವನ್ಯಜೀವಿಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಪರ್ಯಾಯಗಳನ್ನು ಬಳಸಬೇಕು ಎಂದು ತಿಳಿಸಿದರು.
ವಿಶ್ವ ಪರಿಸರ ದಿನದಂದು ಹೆಚ್ಚು ಹೆಚ್ಚು ಮರಗಳನ್ನು ನೆಡುವ, ನೆಟ್ಟ ಮರಗಳನ್ನು ಸಂರಕ್ಷಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಸಂಕಲ್ಪ ಮಾಡೋಣ ಎಂದರು.
ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ್ ಬಿ. ಕರದಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶ ಕಿಶನ್ ಬಿ. ಮಾಡಲಗಿ, ಸಿವಿಲ್ ನ್ಯಾಯಾಧೀಶ ಅಭಿಷೇಕ್ ಆರ್. ಜೋಶಿ, ಸರ್ಕಾರಿ ಸಹಾಯಕ ಅಭಿಯೋಜಕಿ ಅಂಜನಾದೇವಿ ಆರ್, ಅಪ್ಪರ್ ಜಿಲ್ಲಾ ಸರ್ಕಾರಿ ವಕೀಲ ವಿ.ಆರ್ ಕಾಂತಾ, ಪೊಲೀಸ್ ವೃತ್ತ ನಿರೀಕ್ಷಕ ಎಸ್.ಸಿ ಪಾಟೀಲ್ ಸೇರಿದಂತೆ ಅನೇಕ ಮುಖಂಡರು, ವಕೀಲರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.






