ಸಚಿವ ಡಾ.ಶರಣಪ್ರಕಾಶ್ ಪಾಟೀಲರಿಗೆ ಜೂ.14ರಂದು ಅಭಿನಂದನಾ ಸಮಾರಂಭ

ಸೇಡಂ: ರಾಜ್ಯ ಸರ್ಕಾರದಲ್ಲಿ ಸತತ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸೇಡಂ ಕ್ಷೇತ್ರದ ಶಾಸಕ ಹಾಗೂ ಜನಪ್ರಿಯ ನಾಯಕ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಸೇಡಂ ಮತ್ತು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಭವ್ಯ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಈ ಕುರಿತು ಜಂಟಿಯಾಗಿ ಪತ್ರಿಕಾ ಪ್ರಕಟಣೆ ನೀಡಿರುವ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಹಾಗೂ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ್, ಜೂನ್ 14ರಂದು ಬೆಳಿಗ್ಗೆ 11.45 ಗಂಟೆಗೆ ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಪ್ರಾಂಗಣದಲ್ಲಿರುವ ನಾಗೇಂದ್ರಪ್ಪ ಪಾಟೀಲ ಬೊಮ್ಮನಹಳ್ಳಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾಗಿ ಡಾ. ಶರಣಪ್ರಕಾಶ ಪಾಟೀಲ ಅವರು ಪುನರಾಯ್ಕೆಯಾಗಿರುವುದು ಸೇಡಂ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಹಾಗೂ ಮುಧೋಳ ಬ್ಲಾಕ್ ಕಾಂಗ್ರೆಸ್ ಘಟಕಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅವರನ್ನು ಸನ್ಮಾನಿಸಿ ಅಭಿನಂದಿಸಲಿದ್ದಾರೆ.
ಸೇಡಂ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಡಾ. ಶರಣಪ್ರಕಾಶ ಪಾಟೀಲ ಅವರು ಸತತ ಮೂರನೇ ಬಾರಿ ಸಚಿವರಾಗಿರುವುದು ಕ್ಷೇತ್ರದ ಜನತೆಗೆ ಸಂತಸದ ವಿಚಾರವಾಗಿದ್ದು, ಈ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಶಿವಶರಣರೆಡ್ಡಿ ಪಾಟೀಲ ಮತ್ತು ರವೀಂದ್ರ ನಂದಿಗಾಮ್ ಮನವಿ ಮಾಡಿದ್ದಾರೆ.






