ಕೆ.ಎಚ್.ಮುನಿಯಪ್ಪಗೆ ಉನ್ನತ ಸಚಿವ ಖಾತೆ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಿದರು.
ಈ ವೇಳೆ ಮಾತನಾಡಿದ ಮುಖಂಡರು, ಮಾದಿಗ ಸಮಾಜದ ಹಿರಿಯ ನಾಯಕ, ಏಳು ಬಾರಿ ಸಂಸದ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಮಹತ್ವದ ಖಾತೆ ಅಥವಾ ಉನ್ನತ ಜವಾಬ್ದಾರಿಯ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಮುಖ್ಯಮಂತ್ರಿ ನೇತೃತ್ವದ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮನವಿ ಮಾಡಿದರು.
ಕೆ.ಎಚ್.ಮುನಿಯಪ್ಪ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದು, ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ ಮತ್ತು ನಾಯಕತ್ವವನ್ನು ರಾಜ್ಯದ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಕ್ತವಾದ ಉನ್ನತ ಖಾತೆ ನೀಡಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ತಾರಫೈಲ್ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಗಳಾದ ಸುರಾಜ್ ಬೆಳಗುಂದಿ, ರವಿ ಬೆಳಗುಂದಿ, ಪ್ರಕಾಶ್ ಮಾಳಿಗೆ, ರೋಹಿತ್ ಗುಲ್ಲಾಬಾಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






