SIR ವಿಚಾರದಲ್ಲಿ ಕಾಂಗ್ರೆಸ್‌ನಿಂದ ಅಪಪ್ರಚಾರ, ಜನರಲ್ಲಿ ಗೊಂದಲ ಸೃಷ್ಟಿ : ಬಿ.ವೈ.ವಿಜಯೇಂದ್ರ ಆರೋಪ
"ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರಲಿದೆ"

ಕಲಬುರಗಿ: ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ದೇಶಾದ್ಯಂತ ಜನಾಂದೋಲನ ಹಮ್ಮಿಕೊಂಡಿದೆ. ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಮೂಲಕ ಅಪಪ್ರಚಾರ ನಡೆಸುತ್ತಿದೆ. ಚುನಾವಣಾ ಪ್ರಕ್ರಿಯೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ನಗರದಲ್ಲಿ ಬುಧವಾರ ಬಿಜೆಪಿ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆ ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದು ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇಶದ ಪ್ರಗತಿ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಹೆಚ್ಚುತ್ತಿರುವ ಗೌರವವನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದರು.
ರಾಹುಲ್ ಗಾಂಧಿ ವಿದೇಶಗಳಿಗೆ ತೆರಳಿ ಭಾರತದ ಬಗ್ಗೆ ಅಪಮಾನಕರವಾಗಿ ಮಾತನಾಡುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ಪ್ರಧಾನಿಯಾಗುವ ಹಗಲುಗನಸು ಕಾಣುತ್ತಿರುವ ಅವರಿಗೆ ಆ ಅವಕಾಶ ಎಂದಿಗೂ ಸಿಗುವುದಿಲ್ಲ. ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ. ಮೋದಿ ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ ದಂಗೆ ಮತ್ತು ಅರಾಜಕತೆಯ ವಾತಾವರಣ ಸೃಷ್ಟಿಸುವ ಕುತಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ದೇಶದ ಜನರು ಮೋದಿ ನಾಯಕತ್ವದ ಮೇಲೆ ವಿಶ್ವಾಸವಿಟ್ಟಿದ್ದಾರೆ. ಪ್ರಧಾನಿ ಮೋದಿ ಕುರಿತು ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಖರ್ಗೆಯವರು ‘ಮೋದಿ ಭೀ ಜಾಯೇಗಾ, ಮೋದಿ ಕೀ ಭಾಪ್ ಭೀ ಜಾಯೇಗಾ’ ಎಂದು ಹೇಳಿದ್ದಾರೆ. ಆದರೆ ಮೋದಿ ಎಲ್ಲಿಗೂ ಹೋಗುವುದಿಲ್ಲ. ದೇಶದ ಜನರ ಆಶೀರ್ವಾದ ಅವರೊಂದಿಗಿದೆ ಎಂದರು.
ಇವಿಎಂ ಬಗ್ಗೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ನಾಯಕರು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ ಗೆಲುವು ಸಾಧಿಸಲಿದೆ. ಕನಿಷ್ಠ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಈ ಮೂಲಕ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರಿಗೂ ಭರವಸೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮನಸ್ಸಿಲ್ಲ :
ಕಳೆದ ಏಳು ದಿನಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರು ಆಶಾ ಕಾರ್ಯಕರ್ತೆಯರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದ ಬಳಿಕ ಆ ಭರವಸೆಗಳನ್ನು ಈಡೇರಿಸಲು ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ? ಅವರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಸರ್ಕಾರಕ್ಕಿಲ್ಲವೇ ಎಂದು ಪ್ರಶ್ನಿಸಿದರು.
ರೈತರ ಪಾಲಿಗೆ ರಾಜ್ಯ ಸರ್ಕಾರ ಬದುಕಿದ್ದರೂ ಸತ್ತಂತಾಗಿದೆ :
ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಬದುಕು ಹಸನಾಗಿಸುವ ಬದಲು ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರ ರೈತರ ಪಾಲಿಗೆ ಬದುಕಿದ್ದರೂ ಸತ್ತಂತಾಗಿದೆ. ರೈತರ ಸಂಕಷ್ಟಗಳಿಗೆ ಪರಿಹಾರ ಒದಗಿಸುವ ಬದಲು ರಾಜಕೀಯ ಪ್ರಚಾರ ಮತ್ತು ಅಧಿಕಾರದ ಸ್ವಾರ್ಥದಲ್ಲೇ ಸರ್ಕಾರ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.






