ಚಿಂಚೋಳಿ, ಕಾಳಗಿಯನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ: ವೀರಣ್ಣ ಗಂಗಾಣಿ

ಕಲಬುರಗಿ: ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದರೂ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಅತ್ಯಂತ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ವೀರಣ್ಣ ಗಂಗಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹಲವು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಚಿಂಚೋಳಿ ಹಾಗೂ ಕಾಳಗಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬೆಳೆಗಳ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಜಿಲ್ಲೆಯ ವಾಸ್ತವ ಬರ ಪರಿಸ್ಥಿತಿಯನ್ನು ಸರ್ಕಾರ ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಕೂಡಲೇ ಪ್ರಕಟಿಸಿ, ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಹಾಗೂ ಇತರೆ ಸೌಲಭ್ಯಗಳನ್ನು ರೈತರಿಗೆ ತಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ರೈತರ ಸಂಕಷ್ಟವನ್ನು ನಿರ್ಲಕ್ಷಿಸಿ ಸರ್ಕಾರ ಮೌನ ವಹಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.
ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೂಡಲೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವ ಸಮೀಕ್ಷೆ ನಡೆಸಿ, ಕಲಬುರಗಿಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸಬೇಕು. ಇಲ್ಲದಿದ್ದರೆ ರೈತ ಸೇನೆ ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದರು.






