ಕಲಬುರಗಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ಆಗ್ರಹ

ಕಲಬುರಗಿ : ಜಿಲ್ಲೆಯ ಆಡಳಿತ ವೈಫಲ್ಯಗಳು ಹೆಚ್ಚುತ್ತಿದ್ದು, ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಪೊಲೀಸ್ ಹಾಗೂ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರ ಜಿಲ್ಲೆಯಲ್ಲೇ ಇಂತಹ ಗಂಭೀರ ಘಟನೆ ನಡೆದಿರುವುದು ಸರ್ಕಾರದ ವೈಫಲ್ಯವನ್ನು ಬಯಲಿಗೆಳೆಯುತ್ತದೆ. ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ವಿಫಲರಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅಫಜಲಪುರ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾದ ಪ್ರಕರಣ ಹಾಗೂ ದಂಡೋತಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಗಳಲ್ಲಿ ಸಮಗ್ರ ತನಿಖೆ ನಡೆದಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲಬುರಗಿಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ಅವಿನಾಶ್ ಜಾಧವ್ ಮಾತನಾಡಿ, ಅಕ್ರಮ ಗಣಿಗಾರಿಕೆ ಕುರಿತು ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಸಚಿವರು ಜಿಲ್ಲೆಯ ಸಮಸ್ಯೆಗಳತ್ತ ಗಮನಹರಿಸಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಗ್ರಾಮ ಪಂಚಾಯಿತಿಗಳಿಗೆ ಸಮರ್ಪಕ ಅನುದಾನ ಸಿಗುತ್ತಿಲ್ಲ. ವಿದ್ಯುತ್ ವ್ಯತ್ಯಯದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿ.ಜಿ. ಪಾಟೀಲ್, ಶರಣಪ್ಪ ತಳವಾರ, ಮಹಾದೇವ ಬೆಳಮಗಿ, ಲಿಂಗರಾಜ ಬಿರಾದಾರ, ಧರ್ಮಣ್ಣ ಇಟಗಿ, ಆನಂದ ಪಾಟೀಲ್, ಶಿವರಾಜ ಪಾಟೀಲ ರದ್ದೆವಾಡಗಿ ಮತ್ತಿತ್ತರರು ಉಪಸ್ಥಿತರಿದ್ದರು.






