ಕಲಬುರಗಿಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹ

ಆಳಂದ: ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಜೋಳ, ತೊಗರಿ, ಉದ್ದು, ಹೆಸರು, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳು ಒಣಗುವ ಹಂತಕ್ಕೆ ತಲುಪಿದ್ದು, ರೈತರು ಅಪಾರ ನಷ್ಟದ ಆತಂಕ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆ ಮಾತ್ರವಲ್ಲದೆ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗುತ್ತಿದೆ. ಆದ್ದರಿಂದ ಸರ್ಕಾರ ಯಾವುದೇ ವಿಳಂಬ ಮಾಡದೆ ವಿಶೇಷ ಅಧಿಕಾರಿಗಳ ತಂಡವನ್ನು ಜಿಲ್ಲೆಗೆ ಕಳುಹಿಸಿ ಬೆಳೆಹಾನಿಯ ಸಮಗ್ರ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳ ಅನ್ವಯ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ, ಇನ್‌ಪುಟ್ ಸಬ್ಸಿಡಿ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ ಹಾಗೂ ಅಗತ್ಯವಿದ್ದರೆ ಹೊಸ ಕೃಷಿ ಸಾಲ ಸೌಲಭ್ಯ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳಿಗಾಗಿ ಮೇವು ಬ್ಯಾಂಕ್‌ಗಳನ್ನು ಆರಂಭಿಸಿ ಸಮರ್ಪಕ ಮೇವು ಪೂರೈಕೆ ಮಾಡಬೇಕು. ಜೊತೆಗೆ ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಸುಭಾಷ್ ಗುತ್ತೇದಾರ ಆಗ್ರಹಿಸಿದ್ದಾರೆ.






