ಕಲಬುರಗಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ: ನಿತಿನ್ ಗುತ್ತೇದಾರ್ ಆಗ್ರಹ

ಅಫಜಲಪುರ: ಮಳೆ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ, ರಾಜ್ಯ ಸರ್ಕಾರ ಘೋಷಿಸಿರುವ ಬರಗಾಲ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಅಫಜಲಪುರ ಸೇರಿದಂತೆ ಜಿಲ್ಲೆಯ ಯಾವುದೇ ತಾಲೂಕುಗಳನ್ನು ಸೇರ್ಪಡೆ ಮಾಡದಿರುವುದು ಖಂಡನೀಯ ಎಂದು ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದರು. ಆದರೆ, ಬರಗಾಲ ಘೋಷಣೆ ಮಾಡುವ ಸಂದರ್ಭದಲ್ಲಿ ಇಡೀ ಜಿಲ್ಲೆಯನ್ನು ಕಡೆಗಣಿಸಿರುವುದು ಜಿಲ್ಲೆಯ ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಆಡಳಿತ ಪಕ್ಷದ ಶಾಸಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಜಿಲ್ಲೆಯ ರೈತರ ನೆರವಿಗೆ ಧಾವಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ತೊಗರಿ ಮತ್ತು ಹತ್ತಿ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ರೈತರು ಈಗಾಗಲೇ ಸಾಲ ಮಾಡಿ ಬಿತ್ತನೆ ಮಾಡಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕಾದ ಸರ್ಕಾರವೇ ಜಿಲ್ಲೆಯನ್ನು ಬರಗಾಲ ಪಟ್ಟಿಯಿಂದ ಹೊರಗಿಟ್ಟಿರುವುದು ರೈತ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಕಲಬುರಗಿ ಜಿಲ್ಲೆಯ ಆರ್ಥಿಕತೆ ಕೃಷಿಯೊಂದಿಗೆ ನೇರವಾಗಿ ಬೆಸೆದುಕೊಂಡಿದ್ದು, ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿಯ ಮೇಲೆ ಮಳೆ ಕೊರತೆಯ ಪರಿಣಾಮ ಗಂಭೀರವಾಗಿದೆ. ಸಾವಿರಾರು ರೈತ ಕುಟುಂಬಗಳ ಬದುಕು ತೊಗರಿ ಬೆಳೆಯನ್ನೇ ಅವಲಂಬಿಸಿದೆ.
ತೊಗರಿ ಬೇಳೆ ಮಿಲ್‌ಗಳು, ಕೃಷಿ ಉತ್ಪನ್ನಗಳ ವ್ಯಾಪಾರ, ಗೋದಾಮುಗಳು, ಸಾರಿಗೆ, ಬೀಜ ಸಂಸ್ಕರಣಾ ಘಟಕಗಳು ಸೇರಿದಂತೆ ಹಲವು ಕೃಷಿ ಆಧಾರಿತ ಉದ್ಯಮಗಳು ಕೃಷಿ ಉತ್ಪಾದನೆಯನ್ನೇ ಅವಲಂಬಿಸಿವೆ. ಬೆಳೆ ಹಾನಿಯಾದರೆ ಅದರ ಪರಿಣಾಮ ರೈತರಿಗೆ ಮಾತ್ರ ಸೀಮಿತವಾಗದೆ ವ್ಯಾಪಾರ, ಕೈಗಾರಿಕೆ, ಉದ್ಯೋಗ ಹಾಗೂ ಜಿಲ್ಲೆಯ ಒಟ್ಟಾರೆ ಆರ್ಥಿಕ ಚಟುವಟಿಕೆಗಳ ಮೇಲೂ ಬೀಳಲಿದೆ ಎಂದು ಎಚ್ಚರಿಸಿದರು.
ಹೀಗಾಗಿ ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡದೆ ಕಲಬುರಗಿ ಜಿಲ್ಲೆಯ ಮಳೆ ಕೊರತೆಯಿರುವ ಎಲ್ಲ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಡಳಿತ ಪಕ್ಷದ ಶಾಸಕರ ವಿರುದ್ಧ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನಿತಿನ್ ಗುತ್ತೇದಾರ್ ಎಚ್ಚರಿಕೆ ನೀಡಿದರು.






