ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ ಪರಿಹಾರ ನೀಡಿ: ಜಗನ್ನಾಥ ರೆಡ್ಡಿ

ಸೇಡಂ: ಮಳೆ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ರೆಡ್ಡಿ ಗೋಟೂರ ಒತ್ತಾಯಿಸಿದರು.
ಈ ಕುರಿತು ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ 110 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಆದರೆ ಕಲಬುರಗಿ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯದೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಇದುವರೆಗೆ ರೈತರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ದೂರಿದರು.
ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಹಿತಾಸಕ್ತಿ ಹಾಗೂ ಜಿಲ್ಲೆಯ ಕೃಷಿ ಆಧಾರಿತ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವರಾಮ ರೆಡ್ಡಿ ಕೋಡಗಂಟಿ, ಚಾಂದ್ ಪಾಶಾ, ಶಖೀಲ್ ಶೇಖ್, ಅರುಣ ಪೂಜಾರಿ, ಶಿವಪುತ್ರಪ್ಪ ಮೋಘ, ಸೂರ್ಯಕಾಂತ ಹಂಗನಹಳ್ಳಿ, ಅಹ್ಮದ್ ಪಟೇಲ್, ಕವಿತಾ ನಿಡಗುಂದ, ರಿಯಾಜ್ ಪಟೇಲ್ ಸೇರಿದಂತೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






