ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ಪ್ರಗತಿಯಲ್ಲಿದೆ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ

ರಾಯಚೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಪ್ರಗತಿಯಲ್ಲಿದ್ದು, ತನಿಖೆ ನಡೆದ ನಂತರ ವರದಿ ಸಲ್ಲಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ತಿಳಿಸಿದರು.
ಬುಧವಾರ ಸುಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಸಾಕಷ್ಟು ದೂರುಗಳು ಆಯೋಗಕ್ಕೂ ಬರುತ್ತಿವೆ. ಅವೆಲ್ಲವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದರು.
ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಆ ನಿಟ್ಟಿನಲ್ಲಿಯೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ದೌರ್ಜನ್ಯದ ಪ್ರಕರಣಗಳ ಕುರಿತು ಮಾಹಿತಿ ಪಡೆದು ಅವುಗಳ ತಡೆಗೆ ಕ್ರಮ ವಹಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಆಯೋಗಕ್ಕೆ ಬಂದಿರುವ ದೂರುಗಳಿಗೆ ಸ್ಪಂದಿಸಿ ನ್ಯಾಯ ಒದಗಿಸುವಂತೆ ಆಯಾ ಜಿಲ್ಲೆಗಳ ಡಿಸಿ, ಎಸ್ಪಿ ಅವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದರು.





