ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಅಬಾಕಸ್, ವೇದಗಣಿತ ಸ್ಪರ್ಧೆ: 1,500 ವಿದ್ಯಾರ್ಥಿಗಳು ಭಾಗಿ

ಕಲಬುರಗಿ: ಎಸ್ಆರ್ಜೆ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ವೇದಗಣಿತ ಎಕ್ಸಲೆನ್ಸ್ ಸ್ಪರ್ಧೆ ನಗರದಲ್ಲಿ ಶನಿವಾರ ಯಶಸ್ವಿಯಾಗಿ ನಡೆಯಿತು.
ಕಲಬುರಗಿ ಜಿಲ್ಲೆಯ ವಿವಿಧ ಭಾಗಗಳ ಸುಮಾರು 30 ಶಾಲೆಗಳಿಂದ 1,500 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಗಣಿತದ ಪ್ರತಿಭೆ, ಏಕಾಗ್ರತೆ, ಸ್ಮರಣಶಕ್ತಿ ಹಾಗೂ ವೇಗದ ಲೆಕ್ಕಾಚಾರದ ಸಾಮರ್ಥ್ಯವನ್ನು ಪ್ರದರ್ಶಿಸಿದರು.
ಎಸ್ಆರ್ಜೆ ಸಂಸ್ಥೆಯ ಸಹಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಕೆ. ಜೋಶಿ ಮತ್ತು ಸಂಸ್ಥಾಪಕಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಪ್ರಿಯಾ ಆರ್. ಜೋಶಿ ಸ್ಪರ್ಧೆಯನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳಲ್ಲಿ ಗಣಿತದ ಬಗ್ಗೆ ಆಸಕ್ತಿ, ಆತ್ಮವಿಶ್ವಾಸ ಹಾಗೂ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಕೇವಲ 10 ನಿಮಿಷಗಳ ಅವಧಿಯಲ್ಲಿ ಗಣಿತದ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ತಮ್ಮ ವೇಗ ಮತ್ತು ನಿಖರತೆಯನ್ನು ಸಾಬೀತುಪಡಿಸಿದರು.
ಕಳೆದ 10 ವರ್ಷಗಳಿಂದ ಕಲಬುರಗಿಯಲ್ಲಿ ಮಕ್ಕಳ ಗಣಿತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಸ್ಆರ್ಜೆ ಸಂಸ್ಥೆಯು ಇಂತಹ ಶೈಕ್ಷಣಿಕ ಹಾಗೂ ಪ್ರೇರಣಾತ್ಮಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರುವುದು, ಗಣಿತದ ಭಯವನ್ನು ಹೋಗಲಾಡಿಸುವುದು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸಾಧನೆಯ ಆತ್ಮವಿಶ್ವಾಸ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
ಈ ಸ್ಪರ್ಧೆಯು ಕೇವಲ ಬಹುಮಾನ ಅಥವಾ ಪ್ರಥಮ ಸ್ಥಾನಕ್ಕೆ ಸೀಮಿತವಾಗದೆ, ಪ್ರತಿಯೊಬ್ಬ ವಿದ್ಯಾರ್ಥಿಗೂ ತನ್ನ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಕಲ್ಪಿಸುವ ವೇದಿಕೆಯಾಗಿದೆ. ಇಂತಹ ಚಟುವಟಿಕೆಗಳು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಮತ್ತು ಸಾಧಿಸುವ ಛಲವನ್ನು ಹೆಚ್ಚಿಸಲಿವೆ ಎಂದು ಸಂಸ್ಥೆ ತಿಳಿಸಿದೆ.
ಸ್ಪರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 6ರಂದು ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ವಿಜೇತರಿಗೆ ಪ್ರಶಸ್ತಿ, ಪದಕ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು.
ಸ್ಪರ್ಧೆಯ ಯಶಸ್ಸಿಗೆ ಸಹಕರಿಸಿದ ಶಾಲೆಗಳ ಆಡಳಿತ ಮಂಡಳಿಗಳು, ಪ್ರಾಂಶುಪಾಲರು, ಶಿಕ್ಷಕರು, ಪಾಲಕರು ಹಾಗೂ ಸಂಸ್ಥೆಯ ಸಿಬ್ಬಂದಿಗೆ ಎಸ್ಆರ್ಜೆ ಸಂಸ್ಥೆಯ ಸಂಸ್ಥಾಪಕರು ಕೃತಜ್ಞತೆ ಸಲ್ಲಿಸಿದ್ದಾರೆ.
“ಪ್ರತಿಯೊಬ್ಬ ಮಗುವಿನಲ್ಲೂ ಒಬ್ಬ ಸಾಧಕನಿದ್ದಾನೆ. ಆ ಸಾಧನೆಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ನೀಡುವುದೇ ನಮ್ಮ ಉದ್ದೇಶ” ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದ್ದಾರೆ.






