ಅಸ್ಪೃಶ್ಯತೆ ಸಮಸ್ಯೆ ಹೋಗಲಾಡಿಸಲು ಡಾ.ಅಂಬೇಡ್ಕರ್ ಅವರು ಜೀವನದುದ್ದಕ್ಕೂ ಶ್ರಮಿಸಿದ್ದರು: ಪ್ರೊ.ನರೇಂದ್ರ ಕುಮಾರ್

ಕಲಬುರಗಿ: ಅಸ್ಪೃಶ್ಯತೆಯ ಸಮಸ್ಯೆ ಹೋಗಲಾಡಿಸಲು ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದರು ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ರಾಜಕೀಯ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ನರೇಂದ್ರ ಕುಮಾರ್ ಅಭಿಪ್ರಾಯಪಟ್ಟರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಡಾ.ಬಿ.ಆರ್.ಅಂಬೇಡ್ಕರ್ ಪರಂಪರೆ: 21ನೇ ಶತಮಾನದ ಸವಾಲುಗಳು ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
ಸಮಾಜದಲ್ಲಿ ಶತಮಾನಗಳಿಂದ ಆಳವಾಗಿ ಬೇರೂರಿದ್ದ ಅಸಮಾನತೆ, ಜಾತಿ ವ್ಯವಸ್ಥೆಯನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಶ್ನಿಸಿದ್ದರು. ಗ್ರೀಕ್‌ನಲ್ಲಿ ಅರಿಸ್ಟಾಟಲ್ ಇದ್ದಂತೆ ಭಾರತದಲ್ಲಿ ಅಂಬೇಡ್ಕರರು ಸಮಾಜದಲ್ಲಿ ಹಲವು ಬದಲಾವಣೆಗಳನ್ನು ತಂದರು ಎಂದರು.
ಅರಿಸ್ಟಾಟಲ್ ಅವರು ಆಡಳಿತದಲ್ಲಿನ ನೈತಿಕತೆಯನ್ನು ಪ್ರತಿಪಾದಿಸಿದ್ದರೆ ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಎಲ್ಲರಿಗೂ ಸಮಾನ ಹಕ್ಕುಗಳು ಸಿಗಬೇಕು ಎಂದು ಬಯಸಿದ್ದರು. ಬೌದ್ಧ ಧರ್ಮ ಹಾಗೂ ಬ್ರಾಹ್ಮಣಶಾಹಿ ವ್ಯವಸ್ಥೆಗಳಲ್ಲಿನ ಹಲವು ಅಂಶಗಳ ಬಗ್ಗೆ ಅಧ್ಯಯನ ಮಾಡಿದ್ದರು ಎಂದರು.
ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು, ‘ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಲದಿಂದ ಇಂದು ಎಲ್ಲರಿಗೂ ಸಮಾನ ಹಕ್ಕುಗಳು ದೊರೆಯುತ್ತಿವೆ. ನಾನು ಒಂದು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ, ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಲು ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯ ಕಾರಣ’ ಎಂದು ಹೇಳಿದರು.
ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯೂ ಆದ ಗುವಿವಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಚಂದ್ರಕಾಂತ ಯಾತನೂರ ಮಾತನಾಡಿದರು.
ಈ ಸಂದರ್ಭದಲ್ಲಿ ಕುಲಸಚಿವ ಪ್ರೊ.ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಪ್ರೊ.ನಿಂಗಣ್ಣ ಕಣ್ಣೂರ, ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ, ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಬಸವರಾಜ ಸಣ್ಣಕ್ಕಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಮರಿಲಿಂಗ ಸೇರಿದಂತೆ ಹಲವರಿದ್ದರು.







