Kalaburagi | ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡಲು ನಿರ್ಲಕ್ಷ್ಯ ಆರೋಪ: ಐವರು ಅಧಿಕಾರಿಗಳಿಗೆ 50 ಸಾವಿರ ರೂ. ದಂಡ

ಸಾಂದರ್ಭಿಕ ಚಿತ್ರ (AI)
ಕಲಬುರಗಿ: ಮಾಹಿತಿ ಹಕ್ಕು ಕಾಯ್ದೆಯಡಿ (RTI) ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಹಾಗೂ ಆಯೋಗದ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ ಐವರು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠವು ತಲಾ ₹10 ಸಾವಿರದಂತೆ ಒಟ್ಟು ₹50 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದ ಮೇಲ್ಮನವಿದಾರರಿಗೆ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ದ್ವಿತೀಯ ಮೇಲ್ಮನವಿಗಳ ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಅವರು ಈ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಬಸವಕಲ್ಯಾಣ ನಗರಸಭೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಸೂರ್ಯಕಾಂತ, ಬೋಳಮಾನ ದೊಡ್ಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ, ಕಲಬುರಗಿ ಮಹಾನಗರ ಪಾಲಿಕೆಯ ಪರಿಸರ ಅಭಿಯಂತರ ಅಭಯಕುಮಾರ, ಕುಷ್ಟಗಿ ತಾಲೂಕಿನ ಜುಮ್ಮಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗುರಪ್ಪ ನಾಯಕ ಹಾಗೂ ಹೊಸಪೇಟೆ ತಾಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರವಿಕುಮಾರ ಎಂಬ ಪ್ರತಿಯೊಬ್ಬರಿಗೂ ₹10 ಸಾವಿರ ದಂಡ ವಿಧಿಸಲಾಗಿದೆ.
ಮೇಲ್ಮನವಿದಾರರಿಗೆ ಮಾಹಿತಿ ಒದಗಿಸಿ, ನೀಡಿದ ಮಾಹಿತಿಯ ಪ್ರತಿ ಹಾಗೂ ಸ್ವೀಕೃತಿ ಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಪಾಲಿಸದಿರುವುದನ್ನೂ ಆಯೋಗ ಗಂಭೀರವಾಗಿ ಪರಿಗಣಿಸಿದೆ.
ದಂಡದ ಮೊತ್ತವನ್ನು ಸಂಬಂಧಪಟ್ಟ ಅಧಿಕಾರಿಗಳ ಮುಂದಿನ ತಿಂಗಳ ವೇತನದಿಂದ ಕಡಿತಗೊಳಿಸಿ, ಆಯೋಗ ಸೂಚಿಸಿರುವ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಬೇಕು. ದಂಡ ಪಾವತಿಸಿದ ರಶೀದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೆ, ಆಯೋಗದ ಆದೇಶ ತಲುಪಿದ ತಕ್ಷಣವೇ ಮೇಲ್ಮನವಿದಾರರಿಗೆ ಮಾಹಿತಿ ಒದಗಿಸಿ, ಅದರ ಪ್ರತಿ ಹಾಗೂ ಸ್ವೀಕೃತಿ ಪತ್ರವನ್ನು ಆಯೋಗಕ್ಕೆ ಸಲ್ಲಿಸಬೇಕು. ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದೇಶ ಪಾಲಿಸದಿದ್ದಲ್ಲಿ ಮಾಹಿತಿ ಹಕ್ಕು ಕಾಯ್ದೆ-2005ರ ಕಲಂ 20(2)ರಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.






