ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಲು ಕೃಷಿಕ ಸಮಾಜದ ಆಗ್ರಹ

ಆಳಂದ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಲಬುರಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅನಾವೃಷ್ಟಿಯಿಂದ ತೊಂದರೆಗೊಳಗಾಗಿರುವ ಜಿಲ್ಲೆಯನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಆಗ್ರಹಿಸಿದರು.
ಕೃಷಿ ಸಚಿವರಾಗಿ ಪಿ.ಎಂ. ನರೇಂದ್ರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಅವರನ್ನು ಅಭಿನಂದಿಸಿದ ಸಿದ್ರಾಮಪ್ಪ ಪಾಟೀಲ ಧಂಗಾಪುರ ಅವರು, ರೈತರ ನಿಯೋಗದೊಂದಿಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮಗಳಡಿ ರಾಜ್ಯ ಸರ್ಕಾರ ಪರಿಹಾರ ನೀಡಿದ್ದರಿಂದ ರೈತರಿಗೆ ಕೊಂಚ ನೆಮ್ಮದಿ ದೊರೆತಿತ್ತು. ಈ ವರ್ಷವೂ ರೈತರು ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ಮುಂಗಾರು ಬಿತ್ತನೆ ಕೈಗೊಂಡಿದ್ದಾರೆ. ಆದರೆ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆಯಾದ ಬೆಳೆಗಳು ಬಾಡುತ್ತಿದ್ದು, ಹಲವು ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬಿತ್ತನೆಯೇ ಸಾಧ್ಯವಾಗಿಲ್ಲ ಎಂದು ಸಚಿವರ ಗಮನಕ್ಕೆ ತಂದರು.
ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ವತಿಯಿಂದ ರೈತರಲ್ಲಿ ಬೆಳೆ ವಿಮೆ ಕುರಿತು ನಿರಂತರ ಜಾಗೃತಿ ಮೂಡಿಸಿದ್ದರಿಂದ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಅನಾವೃಷ್ಟಿಯಿಂದ ಬೆಳೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಧ್ಯಂತರ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರು ಈಗಾಗಲೇ ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಸಾಲ ಮಾಡಿಕೊಂಡಿದ್ದಾರೆ. ಮಳೆ ಕೈಕೊಟ್ಟಿರುವುದರಿಂದ ಬೆಳೆ ನಷ್ಟದ ಜೊತೆಗೆ ಸಾಲದ ಹೊರೆ ಹೆಚ್ಚಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ವಿಳಂಬ ಮಾಡದೆ ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಪರಿಹಾರ ಹಾಗೂ ಬೆಳೆ ವಿಮೆಯ ಮಧ್ಯಂತರ ಪರಿಹಾರ ದೊರಕುವಂತೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ರೈತರ ಪರವಾಗಿ ಹಾಗೂ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಕೃಷಿ ಸಚಿವ ಹಾಗೂ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ರೈತರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸುವಂತೆ ಒತ್ತಾಯಿಸಲಾಗಿದೆ ಎಂದು ಸಿದ್ರಾಮಪ್ಪ ಪಾಟೀಲ ಧಂಗಾಪುರ ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಉಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






