ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ಎಫ್ಐಆರ್ ದಾಖಲು

ಪ್ರಿಯಾಂಕ್ ಖರ್ಗೆ, ಮಣಿಕಂಠ ರಾಠೋಡ್
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಗೃಹ ಸಚಿವ ಹಾಗೂ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಸುಳ್ಳು ಮಾಹಿತಿ ಹರಡಿರುವ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ ಸುಮಾರು 50ರಿಂದ 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕುರಿತು ಪ್ರತಿಕ್ರಿಯಿಸುವ ವೇಳೆ ಮಣಿಕಂಠ ರಾಠೋಡ ಅವರು ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವುದಲ್ಲದೆ, ವಿದ್ಯಾರ್ಥಿಗಳ ಕುರಿತು ಸುಳ್ಳು ಮಾಹಿತಿ ಸಾರ್ವಜನಿಕವಾಗಿ ಹರಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಮಾದಿಗ ಸಮಾಜದ ಮುಖಂಡ ಮಲ್ಲಿಕಾರ್ಜುನ ಸಾಯಿಬಣ್ಣಾ ಅವರು ಜುಲೈ 10ರಂದು ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವೈಯಕ್ತಿಕ ದ್ವೇಷದಿಂದ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಹಾಗೂ ಸುಳ್ಳು ಮಾಹಿತಿ ಹರಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 352 ಹಾಗೂ 353(1)(ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಚಿತ್ತಾಪುರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ರೆಡ್ಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






