ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಸಮಗ್ರ ಕಾರ್ಯಯೋಜನೆ ರೂಪಿಸಿ : ಸಚಿವ ಪ್ರಿಯಾಂಕ್ ಖರ್ಗೆ
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ, ಶಿಕ್ಷಕರಿಗೆ ತರಬೇತಿ ನೀಡಲು ಸಲಹೆ

ಕಲಬುರಗಿ: ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸಮಗ್ರ ಕಾರ್ಯಯೋಜನೆ ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಶಿಕ್ಷಣ ಕ್ಷೇತ್ರದ ತಜ್ಞರು ನಡೆಸಿದ ಪ್ರಾಥಮಿಕ ಪರಿಶೀಲನೆಯ ಆಧಾರದ ಮೇಲೆ ಸಿದ್ಧಪಡಿಸಿದ ಸಲಹೆಗಳನ್ನು ಪರಿಶೀಲಿಸಿದ ಅವರು, ಶಾಲೆಗಳಲ್ಲಿನ ಕಲಿಕೆಯ ಗುಣಮಟ್ಟ, ವಿದ್ಯಾರ್ಥಿಗಳ ಪ್ರಗತಿ, ಶಿಕ್ಷಕರ ಬೋಧನಾ ವಿಧಾನ ಹಾಗೂ ಪರೀಕ್ಷಾ ಸಿದ್ಧತೆಯಲ್ಲಿನ ಕೊರತೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವಂತೆ ನಿರ್ದೇಶನ ನೀಡಿದರು.
ಎಸೆಸೆಲ್ಸಿ ಫಲಿತಾಂಶ ಸುಧಾರಣೆಯ ಕ್ರಮಗಳು ಪರೀಕ್ಷೆಗೆ ಮುನ್ನ ಕೈಗೊಳ್ಳುವ ಪ್ರಯತ್ನಗಳಿಗೆ ಮಾತ್ರ ಸೀಮಿತವಾಗಬಾರದು. ಶೈಕ್ಷಣಿಕ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ನಿರಂತರವಾಗಿ ಮೌಲ್ಯಮಾಪನ ಮಾಡಬೇಕು. ವಿಷಯವಾರು ಪ್ರಗತಿಯನ್ನು ಪರಿಶೀಲಿಸಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಹಾಗೂ ವೈಯಕ್ತಿಕ ಮಾರ್ಗದರ್ಶನ ಒದಗಿಸಬೇಕು ಎಂದು ಸಲಹೆ ನೀಡಿದರು.
ಕಳೆದ ವರ್ಷ ವಿದ್ಯಾರ್ಥಿಗಳಿಗೆ ವಿತರಿಸಿದ್ದ ನಿರೀಕ್ಷಿತ ಪ್ರಶ್ನೆಗಳ ಬ್ಯಾಂಕ್‌ನಿಂದ ಎಷ್ಟರಮಟ್ಟಿಗೆ ಅನುಕೂಲವಾಗಿದೆ ಹಾಗೂ ಪರೀಕ್ಷಾ ಸಾಧನೆಯಲ್ಲಿ ಯಾವ ರೀತಿಯ ಸುಧಾರಣೆಯಾಗಿದೆ ಎಂಬುದರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವಂತೆಯೂ ಸೂಚಿಸಿದರು.
ಶಿಕ್ಷಕರಿಗೆ ಅಗತ್ಯ ತರಬೇತಿ, ಶಾಲೆಗಳಲ್ಲಿ ನಿಯಮಿತ ಶೈಕ್ಷಣಿಕ ಮೇಲ್ವಿಚಾರಣೆ, ಮಾದರಿ ಪರೀಕ್ಷೆಗಳು, ಪೋಷಕರ ಸಹಭಾಗಿತ್ವ ಹಾಗೂ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಆತ್ಮವಿಶ್ವಾಸ ಹೆಚ್ಚಿಸುವ ಕ್ರಮಗಳಿಗೆ ಆದ್ಯತೆ ನೀಡಬೇಕು. ತಜ್ಞರ ಸಲಹೆಗಳನ್ನು ಜಿಲ್ಲೆಯ ಶಾಲೆಗಳ ವಾಸ್ತವ ಪರಿಸ್ಥಿತಿಗೆ ಅನುಗುಣವಾಗಿ ಅನುಷ್ಠಾನಗೊಳಿಸಿ, ಪ್ರಗತಿ ಪರಿಶೀಲನೆಗೆ ನಿರಂತರ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ, ಎಸೆಸೆಲ್ಸಿ ಫಲಿತಾಂಶದಲ್ಲಿ ಗಮನಾರ್ಹ ಸುಧಾರಣೆ ತರುವುದು ಈ ಪ್ರಯತ್ನದ ಉದ್ದೇಶವಾಗಿದೆ. ಸಭೆಯಲ್ಲಿ ಸುಭಾಷ್ ರಾಠೋಡ್ ಸೇರಿದಂತೆ ಇತರರು ಭಾಗವಹಿಸಿದ್ದರು.






