ಕಾಳಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಣಪತಿರಾವ ಸಿಂಗಶೆಟ್ಟಿ ಆಯ್ಕೆ

ಕಾಳಗಿ: ತಾಲೂಕು ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಕಲಾವಿದ ಗಣಪತಿರಾವ ಸಿಂಗಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಕಾಳಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಂತೋಷ್ ಕುಡ್ಡಳ್ಳಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಗಣಪತಿರಾವ ಸಿಂಗಶೆಟ್ಟಿ ಅವರು ಜಿಲ್ಲೆಯಲ್ಲಿ ಸುಮಾರು ಮೂರು ದಶಕಗಳಿಂದ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಗೀತ ಮತ್ತು ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡೂ ಕ್ಷೇತ್ರಗಳಿಗೆ ಅವರು ಸಲ್ಲಿಸಿರುವ ಸೇವೆ ಅನನ್ಯವಾಗಿದೆ ಎಂದು ಶ್ಲಾಘಿಸಿದ್ದಾರೆ.
ಈ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಸಮ್ಮೇಳನ ನಡೆಸಲು ಪೂರ್ವಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮ್ಮೇಳನದಲ್ಲಿ ಸ್ವರಚಿತ ಕವನಗಳನ್ನು ವಾಚಿಸಲು ಆಸಕ್ತಿ ಹೊಂದಿರುವ ಸಾಹಿತಿಗಳು, ಶಿಕ್ಷಕರು ಹಾಗೂ ಕನ್ನಡಾಭಿಮಾನಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




