ಕಲಬುರಗಿಯನ್ನು ಬರಪೀಡಿತವೆಂದು ಘೋಷಿಸದಿದ್ದರೆ ರೈತರೊಂದಿಗೆ ಉಪವಾಸ ಸತ್ಯಾಗ್ರಹ: ಗೌತಮ್ ಪಾಟೀಲ್ ಎಚ್ಚರಿಕೆ

ಕಲಬುರಗಿ: ರಾಜ್ಯ ಸರ್ಕಾರವು ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸದಿದ್ದರೆ ರೈತರೊಂದಿಗೆ ಸೇರಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಗೌತಮ್ ವೈಜನಾಥ ಪಾಟೀಲ್ ಎಚ್ಚರಿಕೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಕಲಬುರಗಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ತಕ್ಷಣ ಮರುಮೌಲ್ಯಮಾಪನ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಹಲವು ದಶಕಗಳಲ್ಲಿ ಕಂಡುಬರದಂತಹ ಭೀಕರ ಬರ ಪರಿಸ್ಥಿತಿ ಈ ಭಾಗದಲ್ಲಿ ನಿರ್ಮಾಣವಾಗಿದೆ. 1972ರ ಬರಗಾಲದ ಬಳಿಕ ಇಷ್ಟು ತೀವ್ರ ಬರ ಪರಿಸ್ಥಿತಿ ಎದುರಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ವರ್ಷ ವಾಡಿಕೆ ಮಳೆಗೆ ಹೋಲಿಸಿದರೆ ಸುಮಾರು ಶೇ.70ರಷ್ಟು ಮಳೆಯ ಕೊರತೆ ಉಂಟಾಗಿದ್ದು, ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ ಎಂದು ಹೇಳಿದರು.
ಮಳೆ ಕೊರತೆಯಿಂದ ಕೊಳವೆಬಾವಿ, ಬಾವಿ ಸೇರಿದಂತೆ ವಿವಿಧ ಜಲಮೂಲಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವವೂ ಉಂಟಾಗಿದೆ. ಇದರ ಪರಿಣಾಮವಾಗಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಅನೇಕ ರೈತರಿಗೆ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಪ್ರದೇಶಗಳಲ್ಲಿಯೂ ಮಳೆಯ ಕೊರತೆಯಿಂದ ತೊಗರಿ, ಹತ್ತಿ ಸೇರಿದಂತೆ ಪ್ರಮುಖ ಬೆಳೆಗಳು ಒಣಗಿ ಹೋಗಿದ್ದು, ರೈತರು ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಸರ್ಕಾರ ಕೇವಲ ಕಚೇರಿ ದಾಖಲೆಗಳು ಮತ್ತು ಅಂಕಿ-ಅಂಶಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳದೆ, ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ ಬರ ಪರಿಸ್ಥಿತಿಯನ್ನು ಮರುಮೌಲ್ಯಮಾಪನ ಮಾಡಬೇಕು ಎಂದು ಆಗ್ರಹಿಸಿದರು.
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸುವುದರ ಜೊತೆಗೆ, ಹೈದ್ರಾಬಾದ್ ಕರ್ನಾಟಕ ಭಾಗದ ತೀವ್ರ ಬರಪೀಡಿತ ಇತರೆ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸಬೇಕು. ಮಳೆಯ ಕೊರತೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರನ್ನೂ ಬರ ಪರಿಹಾರದ ವ್ಯಾಪ್ತಿಗೆ ತಂದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕ ನೆರವು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ ಹರಸೂರ್, ಉಮಾಕಾಂತ ನಿಗ್ಗುಡಗಿ, ಅರುಣಕುಮಾರ್ ಕೊಡಲಹಂಗರಗಾ, ಜಗದೀಶ ಪಾಟೀಲ್ ರಾಜಾಪೂರ್, ಶಿವರಾಜ್ ಮಾಲೀಪಾಟೀಲ್, ಮಲ್ಲಿನಾಥ ಪಾಟೀಲ್ ಕಾಳಗಿ, ಪಿತಂಬರಾವ್ ಘಂಟೆ, ಭವಾನಿರಾವ್ ಪತ್ತೇಪೂರ್ ಮುಂತಾದವರು ಪಾಲ್ಗೊಂಡಿದ್ದರು.






