ರೈತರ, ಮಹಿಳೆಯರ ವಿಚಾರದಲ್ಲಿ ಸರಕಾರ ವೈಫಲ್ಯ : ನಿಖಿಲ್ ಕುಮಾರಸ್ವಾಮಿ ಆರೋಪ

ಸೇಡಂ : ಬರಗಾಲ ಹಾಗೂ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮರ್ಪಕ ಪರಿಹಾರ ನೀಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳ ಪರಿಹಾರಕ್ಕಿಂತ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
2002ರಲ್ಲಿ ಡಾ. ನಂಜುಂಡಪ್ಪ ನೀಡಿದ ಅತಿ ಹಿಂದುಳಿದ ಪ್ರದೇಶಗಳ ವರದಿ ಬಳಿಕವೂ ಪರಿಸ್ಥಿತಿ ಬದಲಾಗಿಲ್ಲ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಸೇಡಂ, ಆಳಂದ ಹಾಗೂ ಅಫಜಲಪುರ ಕ್ಷೇತ್ರಗಳು ಇನ್ನೂ ಮೂಲಸೌಕರ್ಯ ಕೊರತೆಯಿಂದ ಬಳಲುತ್ತಿವೆ ಎಂದು ಹೇಳಿದರು. ಕೆಕೆಆರ್‌ಡಿಬಿ ಮೂಲಕ ಸಾವಿರಾರು ಕೋಟಿ ರೂ. ಅನುದಾನ ಬಂದರೂ ಅದು ರಸ್ತೆ ಮತ್ತು ಕಟ್ಟಡ ಕಾಮಗಾರಿಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖದ ಸಂಗತಿ. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣದ ವಿಚಾರದಲ್ಲೂ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ತಿಂಗಳಿಗೆ ಹಣ ನೀಡುವುದು ಮಾತ್ರ ಸಬಲೀಕರಣವಲ್ಲ. ಎಚ್.ಡಿ. ದೇವೇಗೌಡ ಅವರ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 50% ಮೀಸಲಾತಿ ಜಾರಿಗೆ ತಂದದ್ದು ಮಹಿಳೆಯರಿಗೆ ನಿಜವಾದ ಶಕ್ತಿ ನೀಡಿದೆ ಎಂದರು.
ಇದೇ ವೇಳೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಡೆದ ದುರಂತ ಘಟನೆ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಕಿಡಿಕಾರಿದ ಅವರು, ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ದೌರ್ಬಲ್ಯಗಳ ವಿರುದ್ಧ ಜೆಡಿಎಸ್ ರಾಜ್ಯಾದ್ಯಂತ ಜನಜಾಗೃತಿ ಆಂದೋಲನ ಕೈಗೊಳ್ಳಲಿದೆ ಎಂದು ಘೋಷಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಸಿಸಿಐ ಕಾರ್ಖಾನೆ ಪುನರಾರಂಭಕ್ಕೆ ಭರವಸೆ
ಸೇಡಂ ತಾಲೂಕಿನ ಕುರುಕುಂಟಾದಲ್ಲಿ ಸ್ಥಗಿತಗೊಂಡಿರುವ ಸಿಸಿಐ ಸಿಮೆಂಟ್ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಸ್ಥಳೀಯ ಮುಖಂಡರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಕಾರ್ಖಾನೆ ಪುನರಾರಂಭವಾಗುವ ನಿರೀಕ್ಷೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.






