ಬರ ಪರಿಸ್ಥಿತಿ ಕುರಿತು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇನೆ: ಶಾಸಕ ಬಿ.ಆರ್. ಪಾಟೀಲ್

ಕಲಬುರಗಿ: ಎಲ್‌ನಿನೊ ಪರಿಣಾಮದಿಂದ ಮುಂದಿನ ದಿನಗಳಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ದೊರೆತ ಕೂಡಲೇ ಹವಾಮಾನ ವರದಿಯನ್ನು ಗಂಭೀರವಾಗಿ ಪರಿಗಣಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2026ರ ಮಾರ್ಚ್ 30ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬರಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ಬಳಿಕ ಮೇ 17 ಹಾಗೂ ಜುಲೈ 18ರಂದು ಮತ್ತೊಮ್ಮೆ ಸಭೆ ನಡೆಸಿ ಬರ ಪರಿಸ್ಥಿತಿಯ ತೀವ್ರತೆ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಕಲಬುರಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರ ಸಮ್ಮುಖದಲ್ಲಿಯೇ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಸ್ಪಷ್ಟವಾಗಿ ಪ್ರಸ್ತಾಪಿಸಿ, ಜಿಲ್ಲೆಯ ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇನೆ. ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಸುವುದು ನನ್ನ ಧ್ಯೇಯ. ತಾಲೂಕು ಹಾಗೂ ಜಿಲ್ಲೆಯ ಜನರ ಹಕ್ಕು ಮತ್ತು ಹಿತಕ್ಕಾಗಿ ನನ್ನ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಬಿ.ಆರ್. ಪಾಟೀಲ್ ಭರವಸೆ ನೀಡಿದ್ದಾರೆ.
ಕಳೆದ ಮುಂಗಾರು ಅಧಿವೇಶನದಲ್ಲಿ ಬರಗಾಲದ ಕುರಿತು ಚರ್ಚೆಗೆ ಅವಕಾಶ ನೀಡದೆ ಸಭೆಯನ್ನು ಭಗ್ನಗೊಳಿಸಿದ ಬಿಜೆಪಿ ಸದಸ್ಯರ ವರ್ತನೆ ಜನರ ಹಿತಕ್ಕೆ ವಿರುದ್ಧವಾಗಿದೆ ಎಂದು ಬಿ.ಆರ್. ಪಾಟೀಲ್ ಟೀಕಿಸಿದ್ದಾರೆ.
ಬರ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿ, ರೈತರು ಹಾಗೂ ಜಿಲ್ಲೆಯ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡರು ಇದೀಗ ತಮ್ಮ ವಿರುದ್ಧ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.






