ಕಲ್ಯಾಣ ಕರ್ನಾಟಕದ 37 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ತಿಪ್ಪಣ್ಣಪ್ಪ ಕಮಕನೂರ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 37 ಸಾವಿರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭರವಸೆ ನೀಡಿದರು.
ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನದ ಅಂಗವಾಗಿ ಮಹೇಂದ್ರ ಫೌಂಡೇಷನ್ ವತಿಯಿಂದ ನಗರದ ಪತ್ರಿಕಾ ಭವನದ ಸಾಂಸ್ಕೃತಿಕ ಸಭಾಂಗಣದಲ್ಲಿ ರವಿವಾರ ಆಯೋಜಿಸಿದ್ದ ಜನಕಲ್ಯಾಣ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಕಾರಣಕ್ಕೂ ಮಲತಾಯಿ ಧೋರಣೆ ಆಗಲು ಬಿಡುವುದಿಲ್ಲ. ಈ ಭಾಗದ ಅಭಿವೃದ್ಧಿ ಹಾಗೂ ಖಾಲಿ ಹುದ್ದೆಗಳ ಭರ್ತಿ ಕುರಿತು ಸದನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದರು.
ಸಂವಿಧಾನದ 371(ಜೆ) ವಿಧಿಗೆ ತಿದ್ದುಪಡಿ ತರುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಎರಡನೇ ಸಂವಿಧಾನದಂತಿರುವ ವಿಶೇಷ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಖರ್ಗೆ ಕುಟುಂಬದ ಪ್ರಯತ್ನದಿಂದ ಈ ಭಾಗಕ್ಕೆ ರಾಜಕೀಯ ಅಧಿಕಾರ ಮತ್ತು ಸ್ಥಾನಮಾನಗಳು ದೊರೆತಿವೆ. ಆದರೆ, ಸ್ಥಾನಮಾನ ಪಡೆದ ಮೇಲೂ ಕೃತಜ್ಞತೆ ತೋರಿಸುವುದನ್ನು ಕೆಲವರು ಮರೆಯುತ್ತಾರೆ ಎಂದು ಹೇಳಿದರು.
2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಂದಿನ ಮುಖ್ಯಮಂತ್ರಿಯಾಗುವ ಯೋಗವಿದೆ. ಮಾಜಿ ಸಚಿವ ದಿ. ಬಸವಲಿಂಗಪ್ಪ ಅವರಿಗಿಂತ ಹತ್ತು ಪಟ್ಟು ಹೆಚ್ಚು ಸಾಮರ್ಥ್ಯ ಮತ್ತು ಎದೆಗಾರಿಕೆ ಪ್ರಿಯಾಂಕ್ ಖರ್ಗೆ ಅವರಲ್ಲಿದೆ ಎಂದು ಬಣ್ಣಿಸಿದರು.
ಶೋಷಿತರ ಅಭಿವೃದ್ಧಿಗೆ ಇಚ್ಛಾಶಕ್ತಿಯ ಕೊರತೆ :
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೋಷಿತರ ಅಭಿವೃದ್ಧಿ ಕುರಿತು ವಿಶೇಷ ಉಪನ್ಯಾಸ ನೀಡಿದ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಯೋಜನಾ ಇಲಾಖೆಯ ನಿರ್ದೇಶಕ ಡಿ. ಚಂದ್ರಶೇಖರಯ್ಯ ಮಾತನಾಡಿ, ಎಸ್‌ಸಿ, ಎಸ್‌ಟಿ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದ್ದರೂ ನಿರೀಕ್ಷಿತ ಪ್ರಗತಿ ಏಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಗಂಭೀರವಾಗಿ ಪರಿಶೀಲಿಸಬೇಕಿದೆ ಎಂದರು.
ಇಚ್ಛಾಶಕ್ತಿಯ ಕೊರತೆಯಿಂದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ. ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕಾದರೆ ಗುಣಮಟ್ಟದ ಶಿಕ್ಷಣ, ಒಗ್ಗಟ್ಟು ಮತ್ತು ಸಾಮಾಜಿಕ ಅರಿವು ಬೆಳೆಸಿಕೊಳ್ಳಬೇಕು. ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಶೋಷಿತರ ಅಭಿವೃದ್ಧಿಗೆ ಸಮುದಾಯದ ಹಿತಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳೇ ಕಂಟಕವಾಗುತ್ತಿದ್ದಾರೆ ಎಂದು ಆರೋಪಿಸಿದರು.
ಎಸ್‌ಸಿ, ಎಸ್‌ಟಿ ಸಮುದಾಯಗಳ ಪರವಾದ ಆದೇಶಗಳ ಅನುಷ್ಠಾನಕ್ಕೆ ವಿಳಂಬ ಮಾಡುವ ಅಧಿಕಾರಿಗಳು, ಆ ಸಮುದಾಯಗಳ ವಿರುದ್ಧವಾಗಿ ಬರುವ ತೀರ್ಪು ಮತ್ತು ಆದೇಶಗಳನ್ನು ತಕ್ಷಣ ಜಾರಿಗೊಳಿಸುವ ಮನೋಭಾವ ಹೊಂದಿದ್ದಾರೆ. ಇದರಿಂದ ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಹಿನ್ನಡೆಯಾಗುತ್ತಿದೆ. ಹೀಗಾಗಿ ಶೋಷಿತ ಸಮುದಾಯಗಳ ಕೈಗೆ ರಾಜಕೀಯ ಅಧಿಕಾರ ದೊರೆಯಬೇಕಿದೆ ಎಂದು ಪ್ರತಿಪಾದಿಸಿದರು.
ಇದುವರೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಲಾದ ಒಟ್ಟು ಅನುದಾನದಲ್ಲಿ 24 ಸಾವಿರ ಕೋಟಿ ರೂ. ಖರ್ಚಾಗಿದ್ದು, ವಿಶೇಷ ಯೋಜನೆಗಳಿಗೆ 15 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ಒಟ್ಟಾರೆ 34 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಅಭಿವೃದ್ಧಿ ನಿರೀಕ್ಷಿತ ವೇಗ ಪಡೆದುಕೊಂಡಿಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಕೆಕೆಆರ್‌ಟಿಸಿ ವಿಭಾಗೀಯ ಸಂಚಾರಿ ಅಧಿಕಾರಿ ಈಶ್ವರ ಹೊಸಮನಿ, ಕುಡಾ ಮಾಜಿ ಸದಸ್ಯ ಶ್ಯಾಮ್ ನಾಟೀಕಾರ್, ಮಾಜಿ ಉಪಮೇಯರ್ ಬಾಬು ವಂಟಿ, ನಿವೃತ್ತ ಸೂಪರಿಂಟೆಂಡಿಂಗ್ ಎಂಜಿನಿಯರ್ ಸುರೇಶ ಎಲ್. ಶರ್ಮಾ ಹಾಗೂ ಕೆಪಿಸಿಸಿ ವೈದ್ಯಕೀಯ ವಿಭಾಗದ ಡಾ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಹಾಂಗಾವ್ ಕ್ರಾಸ್ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ ಸಾಲಿಮನಿ, ಎಂ.ಎಸ್. ಇರಾಣಿ ಕಾಲೇಜಿನ ಪ್ರಾಂಶುಪಾಲ ಐ.ಕೆ. ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸತ್ಕರಿಸಲಾಯಿತು.
ಫೌಂಡೇಷನ್ ಅಧ್ಯಕ್ಷೆ ಜ್ಯೋತಿ ಚಂದ್ರಶೇಖರ ದೊಡ್ಡಮನಿ, ಸರ್ಕಾರಿ ಐಟಿಐ ಪುರುಷ ಕಾಲೇಜಿನ ಜೆಟಿಒ ಅನಿಲಕುಮಾರ ಸುಗಂಧಿ, ಕೌಶಲ್ಯ ಮತ್ತು ಔದ್ಯೋಗಿಕ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಬಾಳಿ, ಶೈಕ್ಷಣಿಕ ತಜ್ಞ ಶಿವಾನಂದ ಖಜೂರಿ, ಯಶವಂತ ಶಿಂಧೆ, ಸಿದ್ದಣ್ಣ ಹಾಲಬಾವಿ, ಮಲ್ಲಿಕಾರ್ಜುನ ಅರಬೋಳ, ಬಸಣ್ಣ ಸರ್ಕಾರ ಕೋಳಕೂರ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಪಿಲ್ ನಿರೂಪಿಸಿದರು. ಕಾರ್ಯದರ್ಶಿ ಶರಣಬಸವ ಹೆಗ್ಗೆಡೆ ಸ್ವಾಗತಿಸಿದರು. ಕಾಶಿನಾಥ ಮುಖರ್ಜಿ ವಂದಿಸಿದರು.






